

ಕುಂದಾಪುರ: ಕುಂದಾಪುರ ಕೋಟೇಶ್ವರದ ಕಾಳಾವರ ವರದರಾಜ ಎಂ.ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮವು ಗುರುವಾರ ಜರುಗಿತು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಕೃಷ್ಣ ಕಾಂಚನ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹಾಗೂ ಅವರ ಮುಂದಿನ ವೃತ್ತಿ ಬದುಕಿನಲ್ಲಿ ಹಲವಾರು ಸವಾಲುಗಳು ಎದುರಾಗುತ್ತವೆ ಎಂಬುದನ್ನು ಅರಿತುಕೊಂಡು ಆ ಸವಾಲುಗಳನ್ನು ಎದುರಿಸಲು ಬೇಕಾದ ಮಾನಸಿಕ ಧೈರ್ಯ ಹಾಗೂ ಕೌಶಲಗಳನ್ನು ಬೆಳೆಸಿಕೊಳ್ಳಬೇಕು. ಸ್ನಾತಕೋತರ ಪದವಿಯ ಹಂತದಲ್ಲಿ ಜ್ಞಾನ ಸಂಪಾದನೆಯ ಎಲ್ಲ ಮಾರ್ಗಗಳನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡು ವಿದ್ಯಾಭ್ಯಾಸ ಮುಗಿಸಿಕೊಂಡು ಹೊರ ಬಂದಾಗ ಜೀವನ ಯಶಸ್ವಿಯಾಗುತ್ತದೆ ಎಂದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಅಜ್ಜರಕಾಡು ಡಾ.ಜಿ.ಶಂಕರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಪ್ರೊ. ರವಿಪ್ರಸಾದ್ ಮಾತನಾಡುತ್ತಾ, ಉನ್ನತ ಶಿಕ್ಷಣದ ಅವಕಾಶ ಕೆಲವರಿಗೆ ಮಾತ್ರ ಸಿಗುತ್ತದೆ. ಉನ್ನತ ಶಿಕ್ಷಣದಲ್ಲಿ ಜ್ಞಾನ ಸಂಪಾದನೆಯ ಜೊತೆಗೆ ಸೂಕ್ತ ಕೌಶಲಗಳನ್ನು ವೃದ್ಧಿಸಿಕೊಂಡು ಸ್ಪರ್ಧಾತ್ಮಕ ಪ್ರಪಂಚದಲ್ಲಿ ಉದ್ಯೋಗವನ್ನು ಪಡೆಯಲು ಪ್ರಯತ್ನಿಸಬೇಕು ಎಂದರು.
ಕಾಲೇಜಿನ ಪ್ರಾಂಶುಪಾಲ ಪ್ರೊ.ರಾಮರಾಯ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ. ನಾಗರಾಜ ಎಂ., ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ನಾಗರಾಜ ವೈದ್ಯ, ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ.ಶೇಖರ ಬಿ., ಸಹಾಯಕ ಪ್ರಾಧ್ಯಾಪಕ ಕಾರ್ತಿಕ್ ಪೈ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಗೌತಮಿ ಸ್ವಾಗತಿಸಿದರು. ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ಉದಯ ಶೆಟ್ಟಿ ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು. ರಶ್ಮಿ ನಿರೂಪಿಸಿದರು. ಪ್ರತಿಮಾ ವಂದಿಸಿದರು.