

ಹಾಸನ: ಪ್ರತಿಯೊಬ್ಬರ ಜೀವನಕ್ಕೆ ಮಾನಸಿಕ ಸ್ಥಿತಿ ಬಹಳ ಮುಖ್ಯ ಎಂದು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ನಾಗೇಶ್ ಪಿ.ಆರಾಧ್ಯ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಹಾಸನ ಮತ್ತು ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಹಾಗೂ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯ ಆಶ್ರಯದಲ್ಲಿ ಬುಧವಾರ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಏರ್ಪಡಿಸಿದ್ದ ವಿಶ್ವ ಆತ್ಮಹತ್ಯೆ ತಡೆಗಟ್ಟುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಪ್ರಪಂಚದಲ್ಲಿ ಪ್ರತಿ 40 ಸೆಕೆಂಡಿಗೆ ಒಬ್ಬರಂತೆ ಪ್ರತಿ ಗಂಟೆಗೆ 8 ಲಕ್ಷ ಜನ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಮತ್ತು ಭಾರತದಲ್ಲಿ ಮೂರನೇ ಒಂದು ಭಾಗ ಜನರು ಆತ್ಮಹತ್ಯೆಗೆ ಒಳಗಾಗುತ್ತಿದ್ದಾರೆ. 2018ರಲ್ಲಿ ಶೇ. 12.4ರಷ್ಟಿದ್ದ ಪ್ರಕರಣಗಳು 2022ರಲ್ಲಿ ಶೇ. 22ಕ್ಕೆ ಏರಿಕೆಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಮನೋವೈದ್ಯ ಡಾ.ಕಾರ್ತಿಕ್ ಮಾತನಾಡಿ, ಆತ್ಮಹತ್ಯೆಗೆ ಖಿನ್ನತೆ ಮುಖ್ಯ ಕಾರಣ. ಸಾರ್ವಜನಿಕರಿಗೆ ಅರಿವು ಮೂಡಿಸುವುದರ ಮೂಲಕ ಆತ್ಮಹತ್ಯೆ ತಡೆಗಟ್ಟೋಣ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಅಮರೇಂದ್ರ ಇತರರು ಇದ್ದರು.