ಅನಿಯಮಿತ ವಿದ್ಯುತ್ ಕಡಿತ- ಡಿವೈಎಫ್‌ಐ ಪ್ರತಿಭಟನೆ ಎಚ್ಚರಿಕೆ

DYFY
Published on

ಮಂಗಳೂರು : ಕಳೆದ ಒಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯವರು ಯಾವುದೇ ಪ್ರಕಟಣೆ ಇಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ತೀರಾ ಖಂಡನೀಯ ಕ್ರಮವಾಗಿದೆ ಎಂದು ಡಿವೈಎಫ್‌ಐ ಆಪಾದಿಸಿದೆ.


ಕರ್ನಾಟಕ ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ದಿನನಿತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ನೀತಿಯಾಗಿದೆ. ಅನಿಯಮಿತ ಲೋಡ್ ಶೆಡ್ಡಿಂಗ್ ಬಗ್ಗೆ ಕಾರಣಗಳನ್ನು ಮೆಸ್ಕಾಂ ಅಧಿಕಾರಿಗಳ ಜತೆ ಕೇಳಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ. ಮೆಸ್ಕಾಂ ಕಚೇರಿಗಳಲ್ಲಿ ಸಿಬ್ಬಂದಿಗಳಿಗೂ ಲೋಡ್ ಶೆಡ್ಡಿಂಗ್ ಬಗ್ಗೆ ಮಾಹಿತಿ ಇರುವುದಿಲ್ಲ. ವಿದ್ಯುತ್ ಅಭಾವ ಇದೆಯೇ? ಇಂಧನ ಕೊರತೆಯೇ? ವಿದ್ಯುತ್ ಖರೀದಿಗೆ ಹಣಕಾಸಿನ ಸಂಕಷ್ಟ ಇದೆಯೇ ಎಂಬುದರ ಬಗ್ಗೆ ಸರ್ಕಾರ ಕೂಡಲೇ ಸಾರ್ವಜನಿಕ ಪ್ರಕಟಣೆ ಹೊರಡಿಸಬೇಕು ಎಂದು ಡಿವೈಎಫ್‌ಐ ಆಗ್ರಹಿಸಿದೆ.

ಈಗಾಗಲೇ ಲೋಡ್ ಶೆಡ್ಡಿಂಗ್ ನಿಂದ ರೈತರು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬಹುತೇಕ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದು ಅವರ ಕಲಿಕೆ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೆಸ್ಕಾಂ ಇಲಾಖೆ ಕೂಡಲೇ ಲೋಡ್ ಶೆಡ್ಡಿಂಗ್ ಕೈಬಿಟ್ಟು ಜನರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಒಂದು ವೇಳೆ ವಿಫಲವಾದಲ್ಲಿ ಜಿಲ್ಲೆಯ ಎಲ್ಲಾ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸುವುದಾಗಿ ಎಂದು ಡಿವೈಎಫ್‌ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಅಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತು ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಎಚ್ಚರಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net