ಹವಾಮಾನ ಇಲಾಖೆ ಮಾಹಿತಿ ತಿಳಿಸುವಂತಾಗಬೇಕು

hamana munsuchane
Published on

ಮಡಿಕೇರಿ: ಹವಾಮಾನ ಇಲಾಖೆಯು ಕಾಲ ಕಾಲಕ್ಕೆ ಹೊರಡಿಸುವ ಮುನ್ಸೂಚನೆಯ ಮಾಹಿತಿಯನ್ನು ಸಾರ್ವಜನಿಕರಿಗೆ ತಿಳಿಸಿದ್ದಲ್ಲಿ ಪ್ರಾಕೃತಿಕ ವಿಕೋಪದಿಂದಾಗುವ ಅನಾಹುತವನ್ನು ತಡೆಯಬಹುದಾಗಿದೆ ಎಂದು ಮೈಸೂರು ಆಡಳಿತ ತರಬೇತಿ ಸಂಸ್ಥೆಯ ವಿಕೋಪ ನಿರ್ವಹಣಾ ಕೇಂದ್ರದ ಬೋಧಕರಾದ ಜೆ.ಆರ್.ಡಾ.ಪರಮೇಶ ಸಲಹೆ ನೀಡಿದರು.

ನಗರದ ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಪ್ರಾಕೃತಿಕ ವಿಕೋಪ ಎದುರಿಸುವಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಗುರುವಾರ ನಡೆದ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಸ್ಥಳೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳ ನಿಯೋಜನೆ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಜೊತೆ ಸಮನ್ವಯತೆ ಸಾಧಿಸಬೇಕು. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರ ಆರಂಭಿಸಿ, ಮಾಹಿತಿ ಹಂಚಿಕೊಳ್ಳಬೇಕು. ಹಾಗೆಯೇ ಸಾಮಾಜಿಕ ಮಾಧ್ಯಮಗಳ ಮೂಲಕ ಹೆಚ್ಚು ಹೆಚ್ಚು ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು. ಹೀಗೆ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ಪ್ರತಿಯೊಂದು ಇಲಾಖೆಯು ತಮ್ಮ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ವಿಕೋಪವನ್ನು ತಡೆದು ಹಲವು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಬಹುದು ಎಂದು ಹೇಳಿದರು.

ಪ್ರಕೃತಿ ವಿಕೋಪ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆಯಾಗಿ ಮಾಹಿತಿ ನೀಡುವುದು, ಅರಿವು ಕಾರ್ಯಕ್ರಮ, ತೆರವುಗೊಳಿಸುವಿಕೆ ಮತ್ತಿತರ ಕ್ರಮ ಕೈಗೊಳ್ಳುವುದು, ಸೆಸ್ಕ್ ವಿಭಾಗದ ಮೂಲಕ ವಿದ್ಯುತ್ ಉಪಕರಣಗಳನ್ನು ವಿಕೋಪದ ಸಂದರ್ಭದಲ್ಲಿ ಸೂಕ್ತವಾಗಿ ನಿರ್ವಹಿಸಲು ಸೂಚಿಸಿ ಅಗತ್ಯ ಕ್ರಮಕೈಗೊಳ್ಳುವುದು. ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್‌ಗಳಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಸುವುದು, ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಭೂವಿಜ್ಞಾನಿಗಳು ಭೂಕುಸಿತ ಪೀಡಿತ ಪ್ರದೇಶಗಳ ಬಗ್ಗೆ ಅಧ್ಯಯನ ನಡೆಸುವುದು, ಹೀಗೆ ಹಲವು ಮುನ್ನೆಚ್ಚರ ಕ್ರಮ ಕೈಗೊಳ್ಳಬೇಕಿದೆ ಎಂದು ಮಾಹಿತಿ ನೀಡಿದರು.

ಜಿಲ್ಲಾ ವಿಕೋಪ ನಿರ್ವಹಣಾ ಪರಿಣಿತರಾದ ಅನನ್ಯ ವಾಸುದೇವ ಮಾಹಿತಿ ನೀಡಿ, ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಹಲವು ಸವಾಲುಗಳನ್ನು ಎದುರಿಸಬೇಕಿದೆ. ಆ ನಿಟ್ಟಿನಲ್ಲಿ ಕಾಲ ಕಾಲಕ್ಕೆ ಅಗತ್ಯ ಮುನ್ನೆಚ್ಚರ ವಹಿಸುವುದು ಅತ್ಯಗತ್ಯ ಎಂದರು.

ಜಿಲ್ಲಾ ಆಡಳಿತ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಬಿ.ಮಾದಪ್ಪ, ವಿವಿಧ ಇಲಾಖೆಯ ಅಧಿಕಾರಿಗಳು ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net