

ದಾವಣಗೆರೆ: ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಚುನಾವಣೆಗೆ ಸ್ಪರ್ಧಿಸಿ, ದಲಿತರ ಹಕ್ಕು ಕಸಿಯುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲು
ಸರ್ಕಾರ ಮುಂದಾಗಬೇಕಿದ್ದು, ನಿರಂತರವಾಗಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಸಬೇಕು ಎಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯಿಸಿದರು.
ವಿಧಾನಸೌಧದ ಮೂರನೇ ಮಹಡಿಯಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಜಾಗೃತಿ ಸಭೆಯಲ್ಲಿ ಮಾತನಾಡಿ,
ರಾಜ್ಯದಲ್ಲಿ ಬೇಡ ಜಂಗಮ ಸೇರಿ ಹಲವು ಪ್ರಬಲ ಅರ್ಹರಲ್ಲದ ಜನಾಂಗಗಳು ನಕಲಿ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದುಕೊಂಡು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ ಎಂದರು.
ಯಾವುದೋ ಜಿಲ್ಲೆಗಳಲ್ಲಿ ಜಾತಿ ಪ್ರಮಾಣ ಪತ್ರ ಪಡೆದು ಬೇರೆ ಯಾವುದೋ ಜಿಲ್ಲೆಯಲ್ಲಿ ಸ್ಪರ್ಧಿಸಿ ದಲಿತರ ಹಕ್ಕನ್ನು ವಂಚಿಸುತ್ತಿದ್ದಾರೆ.
ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳನ್ನು ಮತ್ತು ಪಡೆದ ವಂಚಕರನ್ನು ಕಾನೂನು ಕ್ರಮಕ್ಕೆ ಒಳಪಡಿಸಬೇಕು. ಚುನಾವಣೆ ಸಮಯದಲ್ಲಿ ಗೊಂದಲವಾಗುವ ಮುನ್ನವೇ ಅಧಿಕಾರಿಗಳ ಸಭೆ ಕರೆದು ನಕಲಿ ಜಾತಿ ಪತ್ರಗಳ ಸಮಸ್ಯೆ ನಿವಾರಿಸಬೇಕೆಂದರು.
ರಾಜ್ಯದಲ್ಲಿ ನಕಲಿ ಜಾತಿ ಪ್ರಮಾಣ ಪತ್ರದಡಿ ಮೀಸಲಾತಿ ಪಡೆದು ಸಾವಿರಾರು ಅಭ್ಯರ್ಥಿಗಳು ಸರ್ಕಾರಿ ನೌಕರಿ ಪಡೆದಿದ್ದಾರೆ. ಇಂತಹವರ ವಿರುದ್ಧ ಪ್ರಕರಣ ದಾಖಲಿಸಿ ಶಿಕ್ಷಿಸಿ ಶೋಷಿತ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ದೊರಕಿಸಬೇಕು.
ಶೋಷಿತರ ಪರ ಅವಕಾಶ ವಂಚಿತರ ಪರವಾಗಿ ಕಾಂಗ್ರೆಸ್ ಪಕ್ಷ ಸದಾ ಇರುತ್ತದೆ ಎಂಬ ನಂಬಿಕೆಯನ್ನು ಉಳಿಸಿಕೊಳ್ಳಬೇಕು ಎಂದು ತಿಳಿಸಿದರು.
ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ತಡೆಯಲು ಪ್ರಬಲ ಕಾನೂನನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಸಲಹೆ ನೀಡಿದರು.
ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹಾದೇವಪ್ಪ, ವಿವಿಧ ಇಲಾಖೆ ಅಧಿಕಾರಿಗಳು, ಪರಿಶಿಷ್ಟ ಜಾತಿ ಪಂಗಡದ ಶಾಸಕರು ಉಪಸ್ಥಿತರಿದ್ದರು.