

ಬೆಳಗಾವಿ: ಮಹಾರಾಷ್ಟ್ರ ಪರ ಘೋಷಣೆ ಕೂಗಿದವರು, ಕಾರ್ಯಕ್ರಮ ಆಯೋಜಕರ ವಿರುದ್ಧ ಕೇಸ್ ದಾಖಲಿಸಿ ಬಂಧಿಸುವಂತೆ ಆಗ್ರಹಿಸಿ ಗುರುವಾರ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ನಾರಾಯಣಗೌಡ ಬಣದ ಕಾರ್ಯಕರ್ತರು ಪಾಲಿಕೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆಯಿತು. ಈ ವೇಳೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.
ನಗರದ ಅನಗೋಳದಲ್ಲಿ ನಿರ್ಮಾಣಗೊಂಡಿರುವ ಧರ್ಮವೀರ ಸಂಭಾಜಿ ಮಹಾರಾಜ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸಚಿವ ಶಿವೇಂದ್ರ ಸಿಂಹರಾಜೆ ಭೋಸಲೆ ಮಹಾರಾಷ್ಟ್ರ ಪರ ಘೋಷಣೆ ಕೂಗಿದ್ದಾರೆ. ಮೇಯರ್, ಉಪಮೇಯರ್, ಶಾಸಕರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ನಾಡವಿರೋಧಿ ಹೇಳಿಕೆ ನೀಡಿದವರ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕಾರ್ಯಕರ್ತರು ಒತ್ತಾಯಿಸಿದರು.
ಸೂಕ್ತ ಕ್ರಮಕ್ಕೆ ಆಗ್ರಹ: ಗಡಿಭಾಗದಲ್ಲಿ ತಮ್ಮ ರಾಜಕೀಯ ಲಾಭಕ್ಕಾಗಿ ಬಿಜೆಪಿ, ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್), ಶಿವಸೇನೆ ಮುಖಂಡರು ಮಹಾರಾಷ್ಟ್ರ ಪರ ಘೋಷಣೆ ಕೂಗಿ ನಾಡ ವಿರೋಧಿ ಹೇಳಿಕೆ ನೀಡುತ್ತಿದ್ದಾರೆ. ಇದೀಗ ಮಹಾರಾಷ್ಟ್ರದ ಸಚಿವರೊಬ್ಬರು ಬೆಳಗಾವಿಯಲ್ಲಿ ನಿಂತಿಕೊಂಡು ಜೈ ಮಹಾರಾಷ್ಟ್ರ ಎಂದು ಘೋಷಣೆ ಕೂಗಿದ್ದಾರೆ. ಇವರೆಲ್ಲರ ವಿರುದ್ಧ ನಗರ ಪೊಲೀಸ್ ಆಯುಕ್ತ, ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶಿಸಿ ನಾಡ ವಿರೋಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದರು.
ರಾಜ್ಯಾದ್ಯಂತ ಹೋರಾಟಕ್ಕೆ ಕರೆ: ಈಗಾಗಲೇ ನಾಡದ್ರೋಹಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ದೂರು ಸಲ್ಲಿಸಿದ್ದೇವೆ. ಆದರೆ, ಅಧಿಕಾರಿಗಳ ರಾಜಕೀಯ ಒತ್ತಡಕ್ಕೆ ಮಣಿದು ಕೇಸ್ ದಾಖಲಿಸಿಕೊಳ್ಳುತ್ತಿಲ್ಲ. ಜಿಲ್ಲಾಡಳಿತಕ್ಕೆ ನಾಡಿನ ಹಿತ ರಕ್ಷಣೆಗಿಂತ ರಾಜಕೀಯ ಮುಖ್ಯವಾಗಿದೆ. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ತೀವ್ರ ಹೋರಾಟಕ್ಕೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಸುರೇಶ ಗವನ್ನವರ, ಗಣೇಶ ರೊಕಡೆ, ದಶರಥ ಬನೋಶಿ, ಬಾಳು ಜಡಗಿ, ಮಹೇಶ ಹಟ್ಟಿಹೊಳಿ, ರುದ್ರಗೌಡ ಪಾಟೀಲ, ಸುರೇಶ ಮುರಗೋಡ, ರಮೇಶ ಯರಗಣ್ಣವರ, ರಾಜು ಮುಳಗುಂದ, ಭೀಮಶಿ, ಕಿವಡಿ, ರಾಜು ನಾಶಿಪುಡಿ ಇತರರಿದ್ದರು.