ಬಂಡವಾಳಶಾಹಿಗಳಿಗೆ ಸೂಕ್ಷ್ಮ ಪರಿಸರ ವಲಯ ಅನ್ವಯವಾಗುತ್ತಿಲ್ಲ: ಎನ್.ಯು.ನಾಚಪ್ಪ ಅಸಮಾಧಾನ

cnc janajagruthi
Published on

ಮಡಿಕೇರಿ: ಹಸಿರ ಪರಿಸರ, ಜಲಪ್ರದೇಶಗಳ ಸಂರಕ್ಷಣೆಗಾಗಿ ಸರ್ಕಾರ ಸೂಕ್ಷ್ಮ ಪರಿಸರ ವಲಯದ ಕಾನೂನನ್ನು ಜಾರಿಗೆ ತಂದಿದೆ. ಆದರೆ ಕೊಡಗಿನಲ್ಲಿ ಈ ಕಾನೂನು ಬಂಡವಾಳಶಾಹಿಗಳಿಗೆ ಅನ್ವಯವಾಗುತ್ತಿಲ್ಲ. ಬದಲಿಗೆ ಆದಿಮಸಂಜಾತ ಕೊಡವ ಬುಡಕಟ್ಟು ಜನಾಂಗದ ಮೇಲೆ ಹೇರಲಾಗುತ್ತಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಆರೋಪಿಸಿದರು.


ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಮೂರ್ನಾಡಿನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.


ಆದಿಮಸಂಜಾತ ಕೊಡವ ಬುಡಕಟ್ಟು ಜನರು ಇಲ್ಲಿಯವರೆಗೆ ಹಸಿರಿನ ಕೊಡವ ಭೂಮಿಯನ್ನು ಉಳಿಸಿ ಬೆಳೆಸಿಕೊಂಡು ಬಂದಿದ್ದಾರೆ. ಆದರೆ ಇಂದು ಭೂಮಾಫಿಯಾ, ರೆಸಾರ್ಟ್ ಮಾಫಿಯಾ, ವಿಲ್ಲಾ, ಟೌನ್ ಶಿಪ್, ಬೃಹತ್ ಭೂಪರಿವರ್ತನೆ, ಭೂವಿಲೇವಾರಿ ಮಾಫಿಯಾಗಳು ಹಾಗೂ ಕಪ್ಪುಹಣದ ಬಂಡವಾಳಶಾಹಿಗಳು ಕೊಡವಲ್ಯಾಂಡ್‌ನ್ನು ನಾಶ ಮಾಡುತ್ತಿದ್ದಾರೆ ಮತ್ತು ಕೊಡವರನ್ನು ಬಲಿಪಶು ಮಾಡುತ್ತಿದ್ದಾರೆ. ಈ ಎಲ್ಲಾ ಮಾಫಿಯಾಗಳಿಗೆ ಆಡಳಿತ ವ್ಯವಸ್ಥೆಯ ಕೃಪಾ ಕಟಾಕ್ಷವಿದೆ. ಕೊಡವರಿಗೆ ಮಾತೃಭೂಮಿಯಲ್ಲಿ ನೆಲೆ ಇಲ್ಲದಂತೆ ಮಾಡುವ ಹುನ್ನಾರ ನಡೆದಿದೆ. ಇದಕ್ಕೆ ಕೊಡವ ವಿರೋಧಿಗಳ ಬೆಂಬಲವಿದೆ ಎಂದು ಆರೋಪಿಸಿದರು.


ಕುಟ್ಟ ಅತಿ ಎತ್ತರದ ಬ್ರಹ್ಮಗಿರಿ ಪರ್ವತ ಶ್ರೇಣಿಯಲ್ಲಿದ್ದು, ವಿಶ್ವ ಪಾರಂಪರಿಕ ತಾಣವಾಗಿದೆ. ಆದರೆ, ಸರ್ಕಾರದ ಕಾನೂನು ಕೊಡವರಿಗೆ ಮಾತ್ರ ಅನ್ವಯವಾಗುತ್ತಿದ್ದು, ಬಂಡವಾಳಶಾಹಿಗಳು ಆಡಳಿತ ವ್ಯವಸ್ಥೆಯ ಕೃಪಾ ಕಟಾಕ್ಷದಿಂದ ಯಾವುದೇ ಸೂಕ್ಷ್ಮ ಪರಿಸರ ವಲಯದ ಕಾನೂನಿಗೆ ಒಳಪಡುತ್ತಿಲ್ಲ. ಕೊಡವರು ಮಾತ್ರ ಎಲ್ಲಾ ಕಾನೂನುಗಳಿಗೆ ಒಳಪಟ್ಟು ಆಡಳಿತ ವ್ಯವಸ್ಥೆಯಿಂದ ಕಿರುಕುಳ ಅನುಭವಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.


ಸರ್ಕಾರ ಬೇರೆ ಬೇರೆ ಯೋಜನೆಗಳಿಗೆ ಹಣ ಖರ್ಚು ಮಾಡಿ ಕೈಸುಟ್ಟುಕೊಂಡಿದೆ. ಆರ್ಥಿಕ ಕ್ರೋಢೀಕರಣಕ್ಕಾಗಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯನ್ನು ಮಿತಿ ಮೀರಿ ನಡೆಸುತ್ತಿದೆ. ಇದರಿಂದ ಬೃಹತ್ ಪ್ರಮಾಣದ ಹಣ ನೇರ ಮತ್ತು ಪರೋಕ್ಷವಾಗಿ ಚಲಾವಣೆಯಾಗುತ್ತಿದೆ. ಪ್ರಕೃತಿಯ ಮೇಲೆ ಯಾವುದೇ ರೀತಿಯ ದಾಳಿಯಾದರೂ ಆಡಳಿತ ವ್ಯವಸ್ಥೆ ಮಾತ್ರ ತಟಸ್ಥ ಧೋರಣೆ ಅನುಸರಿಸುತ್ತಿದೆ. ಗ್ರೀನ್ ಬೆಲ್ಟ್ ವ್ಯಾಪ್ತಿಯ ಕಡಗದಾಳುವಿನಲ್ಲಿ ಹಿರಿಯ ಅಧಿಕಾರಿಗಳು ಸೋದರ ಸಂಬಂಧಿಗಳಿಗೆ ರೆಸಾರ್ಟ್ ನಿರ್ಮಾಣಕ್ಕೆ ಸಹಕಾರ ನೀಡುತ್ತಿದ್ದಾರೆ. ಅಲ್ಲದೆ ಈ ಪ್ರದೇಶವನ್ನು ಮೂಡ ವ್ಯಾಪ್ತಿಗೆ ತರುವ ಪ್ರಯತ್ನ ಸಾಗಿದೆ. ಕೊಡವರು ಹೋರಾಟದ ಮೂಲಕ ವೇದನೆಯನ್ನು ಬಿಚ್ಚಿಟ್ಟರೂ ಯಾವುದೇ ಸ್ಪಂದನೆ ಮತ್ತು ರಕ್ಷಣೆ ಇಲ್ಲದಾಗಿದೆ ಎಂದು ಆರೋಪಿಸಿದರು.


ಬಂಡವಾಳಶಾಹಿಗಳಿಗೆ ೯೯ ವರ್ಷಗಳಿಗೆ ಗುತ್ತಿಗೆ ಆಧಾರದಲ್ಲಿ ನೀಡಿರುವ ಸಾವಿರಾರು ಎಕರೆ ಭೂಮಿಯನ್ನು ಸರ್ಕಾರ ಮೊದಲು ವಶಕ್ಕೆ ಪಡೆಯಲಿ. ಜಿಲ್ಲೆಯಲ್ಲಿ ನಡೆದಿರುವ ಬೃಹತ್ ಭೂಪರಿವರ್ತನೆಗಳ ಕುರಿತು ಶ್ವೇತಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.


ಮೂರ್ನಾಡು ಜನಜಾಗೃತಿ ಕಾರ್ಯಕ್ರಮದಲ್ಲಿ ಪ್ರಮುಖರಾದ ಬೊಳ್ಳಚೆಟ್ಟಿರ ಜಯಂತಿ, ಬಿದ್ದಂಡ ಉಷಾ, ಪೆಮ್ಮುಡಿಯಂಡ ವೇಣು, ನಂದೇಟಿರ ರವಿ, ಬಡುವಂಡ ವಿಜಯ, ಪುದಿಯೊಕ್ಕಡ ಕಾಶಿ, ಪುದಿಯೊಕ್ಕಡ ಬೋಪಣ್ಣ, ಪುದಿಯೊಕ್ಕಡ ಸೋಮಯ್ಯ, ಪ್ರೊ. ಚೌರೀರ ಜಗತ್, ನೆರವಂಡ ಅನೂಪ್, ಪೆಮ್ಮಂಡ ಪವಿತ್ರ, ಚೊಕ್ಕಂಡ ಕಟ್ಟಿ, ಅಚ್ಚಕಾಳೆರ ಸಂತು ಮತ್ತಿತರರು ಪಾಲ್ಗೊಂಡು ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ವಿರುದ್ಧ ನಿರ್ಣಯ ಕೈಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net