

ಮೈಸೂರು: ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯಡಿ ಸಾರ್ವಜನಿಕರಲ್ಲಿ ಸಿರಿಧಾನ್ಯಗಳ ಬಗ್ಗೆ ಅರಿವು ಮೂಡಿಸಲು ಡಿ.28ರಂದು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಹಾಗೂ ಸಿರಿಧಾನ್ಯ ನಡಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ಬಿ.ಎಸ್.ಚಂದ್ರಶೇಖರ್ ತಿಳಿಸಿದರು.
ಬೆಳಗ್ಗೆ 8ಕ್ಕೆ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಸಿರಿಧಾನ್ಯ ನಡಿಗೆಗೆ ಚಾಲನೆ ನೀಡಲಾಗುವುದು. ಬೆಳಗ್ಗೆ 11ಕ್ಕೆ ದಸರಾ ವಸ್ತುಪ್ರದರ್ಶನ ಮೈದಾನದಲ್ಲಿರುವ ಪಿ.ಕಾಳಿಂಗರಾವ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಉದ್ಘಾಟಿಸುವರು ಎಂದು ಮಾಹಿತಿ ನೀಡಿದರು.
ಅಂದಾಜು 500 ರೈತರು ಭಾಗವಹಿಸಲಿದ್ದಾರೆ. ಸಿರಿಧಾನ್ಯಗಳನ್ನು ಬೆಳೆಯುವ ಸುಧಾರಿತ ಕ್ರಮಗಳು, ಅವುಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ಸಿರಿಧಾನ್ಯಗಳಿಂದ ತಯಾರಿಸಬಹುದಾದ ಖಾದ್ಯಗಳ ಬಗ್ಗೆ ತಜ್ಞರಿಂದ ಉಪನ್ಯಾಸ ಏರ್ಪಡಿಸಲಾಗಿದೆ. ಸಿರಿಧಾನ್ಯಗಳ ಮೌಲ್ಯವರ್ಧನೆ ಮಾಡಿ ಮಾರಾಟ ಮಾಡಲು ಇಚ್ಛಿಸುವ ಉದ್ದಿಮೆದಾರರಿಗೆ ಅವರ ಉತ್ಪನ್ನಗಳನ್ನು ಪ್ರದರ್ಶಿಸಲು ಹಾಗೂ ಮಾರಾಟ ಮಾಡಲು ಅನುಕೂಲವಾಗುವಂತೆ 20 ಮಾರಾಟ ಮಳಿಗೆ ನಿರ್ಮಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.