

ತುಮಕೂರು:
ಜಿಲ್ಲೆಯಲ್ಲಿ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸಲು ಡಿ.15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆಯಲ್ಲಿ ರೈತರಿಂದ ರಾಗಿ ಖರೀದಿಸಲು ಸೂಕ್ತ ಕ್ರಮ ಕೈಗೊಳ್ಳುವುದಲ್ಲದೆ, ವ್ಯವಸ್ಥಿತವಾಗಿ ನೋಂದಣಿ ಪ್ರಕ್ರಿಯೆಯನ್ನು ನಡೆಸಲು ಆದೇಶಿಸಿದರು.
ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯನ್ನು ಜನವರಿ 1 ರಿಂದ ಪ್ರಾರಂಭಿಸಬೇಕು. ಸರ್ಕಾರದಿಂದ ಪ್ರತಿ ಕ್ವಿಂಟಾಲ್ ರಾಗಿಗೆ 3578 ರೂ.,ಗಳ ಖರೀದಿ ದರವನ್ನು ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ಪ್ರತಿ ಎಕರೆಗೆ ಕನಿಷ್ಟ 10 ಕ್ವಿಂಟಾಲ್‌ನಂತೆ ಗರಿಷ್ಟ 20 ಕ್ವಿಂಟಾಲ್‌ವರೆಗೆ ಮಾತ್ರ ರಾಗಿಯನ್ನು ಖರೀದಿಸಲಾಗುವುದು. ಸರ್ಕಾರ ನಿಗಧಿಪಡಿಸಿದ ಪ್ರಮಾಣವನ್ನು ಮೀರಿ ಹೆಚ್ಚುವರಿಯಾಗಿ ರಾಗಿಯನ್ನು ಖರೀದಿಸುವಂತಿಲ್ಲ ಎಂದು ತಿಳಿಸಿದರು.