ವೈರಮುಡಿ ಬ್ರಹ್ಮೋತ್ಸವಕ್ಕೆ ಅನುದಾನ ಬಿಡುಗಡೆ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

Minister Chaluvarayaswamy meeting regarding Vairamudi Brahmotsavam mandya
Published on

ಮಂಡ್ಯ: ಜಿಲ್ಲಾಡಳಿತದ ವತಿಯಿಂದ ಮಾ.16 ರಿಂದ 28ರವರೆಗೆ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮೂಲ ಸೌಕರ್ಯ ಕಲ್ಪಿಸಲು ತಾತ್ಕಾಲಿಕವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ವೈರಮುಡಿ ಬ್ರಹ್ಮೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕು. ಪ್ರಮುಖವಾಗಿ 21ರಂದು ವೈರಮುಡಿ ಕಿರೀಟಧಾರಣೆ ಮತ್ತು ಉತ್ಸವ ನಡೆಯಲಿದೆ. ಈ ಸಮಯದಲ್ಲಿ ಯಾವುದೇ ಲೋಪವಾಗದಂತೆ ಮುಂಜಾಗ್ರತೆ ವಹಿಸಿ ಎಂದು ಸೂಚನೆ ನೀಡಿದರು.

ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತರಿಗೆ ಮೂಲ ವ್ಯವಸ್ಥೆಗಳಾದ ಶುದ್ಧ ಕುಡಿಯುವ ನೀರು, ಅಗತ್ಯವಿರುವ ಸ್ಥಳಗಳಲ್ಲಿ ತಾತ್ಕಾಲಿಕ ಶೌಚಗೃಹದ ವ್ಯವಸ್ಥೆ, ಪಾಕಿರ್ಂಗ್ ವ್ಯವಸ್ಥೆ ಮಾಡಬೇಕು. ಮೇಲುಕೋಟೆಯ ಪ್ರಮುಖ ರಸ್ತೆಗಳನ್ನು ದುರಸ್ತಿಗೊಳಿಸಿ. ಬ್ರಹ್ಮೋತ್ಸವ ಸಂಬಂಧ ಸರ್ಕಾರದಿಂದ ಅನುದಾನ ಬಿಡುಗಡೆಗೆ ಕ್ರಮವಹಿಸಲಾಗುವುದು. ಅದಕ್ಕೂ ಮುನ್ನ ತಾತ್ಕಾಲಿಕವಾಗಿ ಅನುದಾನ ಬಿಡುಗಡೆಗೊಳಿಸಲಾಗುವುದು. ಅದನ್ನು ಬಳಸಿಕೊಂಡು ಮೂಲ ಸೌಲಭ್ಯ ಕೆಲಸ ಪ್ರಾರಂಭಿಸಿ. ಈ ನಿಟ್ಟಿನಲ್ಲಿ ಸ್ಥಳೀಯ ಶಾಸಕರ ಸಲಹೆಯಂತೆ ಕೆಲಸಗಳನ್ನು ಪ್ರಾರಂಭಿಸಿರಿ. ಜತೆಗೆ ಸಾರ್ವಜನಿಕರ ಸಹಕಾರವು ಅತ್ಯಗತ್ಯ ಎಂದರು.

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತನಾಡಿ, ಭಕ್ತರಿಗೆ ವಾಹನ ಪಾರ್ಕಿಂಗ್‌ಗಾಗಿ ಸ್ಥಳ ಗುರುತಿಸಿ ಸಮತಟ್ಟು ಮಾಡಿ. ಪಾರ್ಕಿಂಗ್ ಸ್ಥಳದಲ್ಲಿ ಕುಡಿಯುವ ನೀರು, ಶೌಚಗೃಹದಂತಹ ಮೂಲ ಸೌಲಭ್ಯ ನೀಡಿ. ವಿದ್ಯುತ್ ದೀಪಗಳ ವ್ಯವಸ್ಥೆ, ಸುಗಮ ವಾಹನ ಸಂಚಾರ ಹಾಗೂ ಭಕ್ತರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆಯನ್ನು ಮಾಡಿಕೊಳ್ಳಿ ಎಂದರು.

ಜಿಲ್ಲಾಧಿಕಾರಿ ಡಾ.ಕುಮಾರ ಮಾತನಾಡಿ, ಜಿಲ್ಲಾ ಹಾಗೂ ತಾಲೂಕು ಕೇಂದ್ರದಿಂದ ಮೇಲುಕೋಟೆಗೆ 140 ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಮಾಡಲಾಗಿದೆ. ಬಸ್ ಪಾರ್ಕಿಂಗ್ ಸ್ಥಳದಿಂದ ದೇವಾಲಯಕ್ಕೆ 10 ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು. ಮಹೋತ್ಸವವನ್ನು ಅಚ್ಚುಕಟ್ಟಾಗಿ ನಡೆಸಲು ಸ್ವಾಗತ, ಆಹಾರ, ಸ್ವಚ್ಛತೆ ಸೇರಿದಂತೆ ವಿವಿಧ ಸಮಿತಿ ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕರಾದ ರಮೇಶಬಂಡಿಸಿದ್ದೇಗೌಡ, ರವಿಕುಮಾರ್ ಗಣಿಗ, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net