ಬೆಳೆಗೆ ನೀರು ಹರಿಸಲು ಸೂಚನೆ: ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ

1 (3)
Published on

ಮಂಡ್ಯ: ಜಿಲ್ಲೆಯಲ್ಲಿ ಬೆಳೆದು ನಿಂತಿರುವ ಬೆಳೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಪ್ರಸ್ತುತ ಅಣೆಕಟ್ಟೆಯಲ್ಲಿ 82 ಅಡಿಯಷ್ಟು ನೀರಿನ ಸಂಗ್ರಹವಿದೆ. ಅಂತೆಯೇ ಮುಂಗಾರು ಮಳೆಯಾಗುವ ನಿರೀಕ್ಷೆಯೂ ಇದೆ. ಆದರೂ 2 ಅಥವಾ 3 ದಿನದಲ್ಲಿ ಮಳೆಯಾಗದಿದ್ದರೆ ನಾಲೆಗಳಿಗೆ ನೀರು ಹರಿಸುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ತಿಳಿಸಲಾಗಿದೆ. ಜಿಲ್ಲೆಯಲ್ಲಿ ಲಕ್ಷಾಂತರ ಟನ್ ಕಬ್ಬು ಕಟಾವು ಹಂತಕ್ಕೆ ಬಂದಿರುವುದರಿಂದ ನೀರಿನ ಅವಶ್ಯತೆ ಇದೆ. ಈ ಹಿನ್ನೆಲೆಯಲ್ಲಿ ರೈತರಿಗೆ ಅನುಕೂಲ ಮಾಡಲು ನೀರು ಹರಿಸುವಂತೆ ಸೂಚಿಸಲಾಗಿದೆ. ಸೋಮವಾರ ಅಥವಾ ಮಂಗಳವಾರ ನೀರು ಬಿಡುಗಡೆ ಮಾಡಬಹುದು. ಮಾತ್ರವಲ್ಲದೆ ಕೃಷಿ ಚಟುವಟಿಕೆಗೆ ಸಹಾಯವಾಗಲೆಂದು ಹಗಲಿನಲ್ಲಿಯೇ ಹೆಚ್ಚಿನ ತ್ರಿ ಫೇಸ್ ವಿದ್ಯುತ್ ನೀಡುವಂತೆಯೂ ಸೆಸ್ಕ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಹಿಂದೆ ನಾನು ಅಧಿಕಾರಲ್ಲಿದ್ದಾಗ ವಿದ್ಯುತ್ ಇಲಾಖೆಯಲ್ಲೂ ಪರಿಣಾಮಕಾರಿಯಾಗಿ ಕೆಲಸ ಮಾಡಲಾಗಿತ್ತು. ಮಂಡ್ಯದ ತೂಬಿನಕೆರೆ ಬಳಿ 220 ಕೆವಿ ವಿದ್ಯುತ್ ಉಪ ಕೇಂದ್ರ ಹೊರತುಪಡಿಸಿದರೆ ಬೇರೆ ಯಾವುದೂ ಇರಲಿಲ್ಲ. ನಾನು ಉಸ್ತುವಾರಿ ಸಚಿವನಾಗಿದ್ದ ವೇಳೆ ನಾಗಮಂಗಲ, ಕೆ.ಆರ್.ಪೇಟೆಯಲ್ಲಿ ಮಾಡಿದ್ದೆವು. ಅದರಿಂದ ಸ್ವಲ್ಪ ಪ್ರಮಾಣದ ವಿದ್ಯುತ್ ಸಮಸ್ಯೆ ನೀಗಿದಂತಾಗಿತ್ತು. ಈಗ ಮಳವಳ್ಳಿ, ಮದ್ದೂರು, ಪಾಂಡವಪುರ, ಶ್ರೀರಂಗಪಟ್ಟಣ ಎಲ್ಲ ತಾಲೂಕುಗಳಲ್ಲೂ ವಿದ್ಯುತ್ ವಿತರಣಾ ಕೇಂದ್ರಗಳನ್ನು ಸ್ಥಾಪಿಸಲು ಯೋಜನೆ ರೂಪಿಸಲಾಗುತ್ತಿದೆ. ಈ ಬಗ್ಗೆ ಇಲಾಖಾ ಸಚಿವರೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿ.ಸಿ ಫಾರ್ಮ್ ಕೃಷಿ ಸಂಶೋಧನಾ ಕೇಂದ್ರವನ್ನು ಜಿಕೆವಿಕೆ ಮಾದರಿಯಲ್ಲಿ ಮೇಲ್ದರ್ಜೆಗೇರಿಸುವ ಸಂಬಂಧ ಆಗಬೇಕಿರುವ ಕೆಲಸದ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅವರು ಮಾಹಿತಿ ಕೊಟ್ಟ ನಂತರ ರೈತರಿಗೆ ಅನುಕೂಲವಾಗುವಂತೆ ಕಾರ್ಯಕ್ರಮ ರೂಪಿಸಲಾಗುವುದು. ಅಂತೆಯೇ ಆಲೆಮನೆಗಳ ಸುಧಾರಣೆಗೆ ಮುಂದಾಗುವ ರೈತರಿಗೆ ಸರ್ಕಾರದಿಂದ ಪ್ರೋತ್ಸಾಹ ನೀಡಲಾಗುವುದು. ಕಬ್ಬು ಬೆಳೆಗಾರರಿಗೆ ತೊಂದರೆಯಾಗದಂತೆ ಸಾವಯವ ಬೆಲ್ಲ ತಯಾರಿಕೆಗೆ ಉತ್ತೇಜನ ನೀಡಲಾಗುವುದು ಎಂದು ಹೇಳಿದರು.

ಕೃಷಿ ಇಲಾಖೆಯಲ್ಲಿ ಬದಲಾವಣೆ ತರಲು ಪ್ರಯತ್ನಿಸಲಾಗುವುದು. ನೆರೆ ರಾಜ್ಯಗಳ ಕೃಷಿ ಇಲಾಖೆಯ ಅಧಿಕಾರಿಗಳ ಸಲಹೆ ಪಡೆದು ಇದಕ್ಕೆ ಮುನ್ನುಡಿ ನೀಡಲಾಗುವುದು. ಕೃಷಿ ಉತ್ಪನ್ನಗಳಿಗೆ ಉತ್ತಮ ಬೆಲೆ, ಮಧ್ಯವರ್ತಿಗಳ ಹಾವಳಿ ತಡೆದು ರೈತರ ಬದುಕನ್ನು ಉತ್ತಮಗೊಳಿಸುವುದು. ಪ್ರಸಕ್ತ ಕೃಷಿ ಹಂಗಾಮಿನಲ್ಲಿ ಭಿತ್ತನೆ ಬೀಜ, ರಸಗೊಬ್ಬರ, ರಾಸಾಯನಿಗಳ ಕೊರತೆಯಾಗದಂತೆ ಎಚ್ಚರ ವಹಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕೃಷಿ ಮಹಾವಿದ್ಯಾಲಯಗಳಲ್ಲಿ ಹೆಚ್ಚಿನ ಸಂಶೋಧನೆ ನಡೆಸಿ ರೈತರಿಗೆ ಉಪಯುಕ್ತ ಮಾಹಿತಿಗಳನ್ನು ನೀಡುವಂತೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪರಿಣಾಮಕಾರಿ ಯೋಜನೆಗಳನ್ನು ನೀಡುವ ಮೂಲಕ ಕೃಷಿ ಉದ್ಯಮಕ್ಕೆ ಹೆಚ್ಚಿನ ಚೈತನ್ಯ ತಂದುಕೊಡುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಸಿ.ಮಂಜುನಾಥ, ರಾಜ್ಯ ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಂ, ಸೋಮಶೇಖರ್ ಕೆರಗೋಡು, ನಿರ್ದೇಶಕ ಸಿ.ಎನ್.ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಬಿ.ಪಿ.ಪ್ರಕಾಶ್ ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net