

ಚಿತ್ರದುರ್ಗ: ನಗರದ ಕವಾಡಿಗರಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ದುರಂತ ಸಂಭವಿಸಿದ ಸ್ಥಳಕ್ಕೆ ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.
ಕಲುಷಿತ ನೀರು ಸೇವಿಸಿ ಮೃತಪಟ್ಟ ಐದು ಕುಟುಂಬದವರಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದ ಸಚಿವ ದಿನೇಶ್ ಗುಂಡೂರಾವ್ ಪರಿಹಾರದ ಚೆಕ್ ವಿತರಿಸಿದ್ದಾರೆ.
ಬಳಿಕ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್ ಅಸ್ವಸ್ಥಗೊಂಡಿರುವವರ ಆರೋಗ್ಯವನ್ನು ವಿಚಾರಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ. ಈ ವೇಳೆ ಜಿಲ್ಲಾ ಸರ್ಜನ್ ಬಸವರಾಜ್ ವಿರುದ್ಧ ರೋಗಿಗಳು ಹಾಗೂ ಅವರ ಸಂಬಂಧಿಕರು ದೂರು ನೀಡಿದ ಹಿನ್ನಲೆಯಲ್ಲಿ ಅವರನ್ನು ತರಾಟೆಗೆ ತೆಗೆದುಕೊಂಡರು.
ಬಳಿಕ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಕವಾಡಿಗರಹಟ್ಟಿ ದುರಂತ ವಿಚಾರ ಸಾಕಷ್ಟು ನೋವುಂಟು ಮಾಡಿದೆ. ಬೇರೆ ಕಡೆ ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರಕರಣ ಸಂಬಂಧ ಸೂಕ್ತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ಇಲಾಖೆಯ ಲೋಪದೋಷವಿದ್ದರೇ ಸರಿಪಡಿಸಲು ಸೂಚನೆ ನೀಡಿದ್ದೇನೆ. ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಈಗಾಗಲೇ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳ ಅಮಾನತು ಆಗಿದ್ದಾರೆ. ಕಾಲೆರಾಗೆ ಶೀಘ್ರಗತಿಯಲ್ಲಿ ಚಿಕಿತ್ಸೆ ಪಡೆದರೆ ಅನಾಹುತ ಆಗಲ್ಲ.
ಈ ಪ್ರಕರಣ ಗಂಭೀರವಾಗಿ ಪರಿಗಣಿಸಲು ನಾವು ಬಂದಿದ್ದೇವೆ. ರಾಜ್ಯದಲ್ಲಿ ಈ ರೀತಿ ನಡೆದ ಎಲ್ಲಾ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಪ್ರಕರಣದ ಎಲ್ಲಾ ವರದಿಗಳೂ ಬಹಿರಂಗವಾಗುತ್ತವೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಆಡಳಿತ ವೈಫಲ್ಯ ಹಾಗೂ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಸರ್ಜನ್ ಬಸವರಾಜು ಅವರನ್ನು ಸಚಿವರ ಆದೇಶದ ಮೇರೆಗೆ ಸೇವೆಯಿಂದ ಅಮಾನತ್ತು ಮಾಡಲಾಗಿದೆ.
ಸಚಿವರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ವೇಳೆ ಸರ್ಜನ್ ಬಸವರಾಜು ಹೆರಿಗೆ ವಾರ್ಡ್, ಎಕ್ಸರೇ ಸೇರಿ ಹಲವೆಡೆ ಲಂಚ ಕೇಳುತ್ತಾರೆ ಎಂದು ರೋಗಿಗಳು ಹಾಗೂ ಅವರ ಸಂಬಂಧಿಕರು ದೂರು ನೀಡಿದ್ದರು. ಈ ಬಗ್ಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಂದ ಸಚಿವರು ಮಾಹಿತಿ ಪಡೆದಿದ್ದು, ಹಲವು ದೂರುಗಳು, ಆಡಳಿತ ವೈಫಲ್ಯ ಕಂಡು ಬಂದ ಹಿನ್ನೆಲೆ ಅಮಾನತ್ತು ಮಾಡಿ ಆದೇಶ ಹೊರಡಿಸಲಾಗಿದೆ.