ತ್ವರಿತ ಪರಿಹಾರ ಕ್ರಮಕ್ಕೆ ಸಚಿವ ಜಾರ್ಜ್ ಸೂಚನೆ

19 ckm 8
ಚಿಕ್ಕಮಗಳೂರು ಡಿಸಿ ಕಚೇರಿ ಆವರಣದಲ್ಲಿರುವ ಕೆಸ್ವಾನ್‌ನಲ್ಲಿ ಸಚಿವ ಕೆ.ಜೆ.ಜಾರ್ಜ್ ಅವರು ವೀಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿದರು. ಡಿಸಿ ಮೀನಾ ನಾಗರಾಜ್, ಎಸ್‌ಪಿ ವಿಕ್ರಮ ಅಮಟೆ, ಜಿಪಂ ಸಿಇಒ ಕೀರ್ತನಾ, ಎಡಿಸಿ ನಾರಾಯಣ ರಡ್ಡಿ ಕನಕರಡ್ಡಿ ಉಪಸ್ಥಿತರಿದ್ದರು.
Published on

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅಧಿಕಾರಿಗಳಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕೆಸ್ವಾನ್‌ನಲ್ಲಿ ವಿಡೀಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಸಭೆ ನಡೆಸಿದ ಅವರು, ಸದ್ಯದ ಪರಿಸ್ಥಿತಿಯನ್ನು ಅವಲೋಕಿಸಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಸಂತ್ರಸ್ತರಿಗೆ ತ್ವರಿತವಾಗಿ ಪರಿಹಾರ ಒದಗಿಸುವಂತೆ ಸಲಹೆ ನೀಡಿದರು.
ಮಳೆಯಿಂದ ಆಗಿರುವ ಹಾನಿಯ ಕುರಿತು ಕೆಳಮಟ್ಟದ ಅಧಿಕಾರಿಗಳು ಮೇಲಧಿಕಾರಿಗಳ ಗಮನಕ್ಕೆ ತಂದು ಪರಿಹಾರ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮನೆಗಳ ಹಾನಿ, ರಸ್ತೆಗಳ ಹಾನಿ ಬಗ್ಗೆ ಸಂಬAಧಪಟ್ಟ ಇಲಾಖೆಯ ಅಧಿಕಾರಿಗಳು ಸರ್ಕಾರದ ನಿಯಮಗಳ ಪ್ರಕಾರ ನೊಂದ ಜನರಿಗೆ ಸಕಾಲದಲ್ಲಿ ಪರಿಹಾರ ನೀಡಲು ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
ಜನ ಜಾನುವಾರು ಮತ್ತಿತರ ಸಮಸ್ಯೆಗಳಿಗೆ ತೊಂದರೆಯಾಗದAತೆ ಎಚ್ಚರ ವಹಿಸಿ ಕೆಲಸ ಮಾಡಬೇಕು ಹಾಗೂ ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಜಿಲ್ಲೆಯ ಜನರ ಸುರಕ್ಷತೆಗೆ ಒತ್ತು ನೀಡುವಂತೆ ತಿಳಿಸಿದ ಅವರು ಪ್ರವಾಹದ ನಂತರದ ಪರಿಣಾಮಗಳನ್ನು ನಿರ್ವಹಿಸಲು ಪೂರ್ವಭಾವಿ ಕ್ರಮಗಳನ್ನು ಕೈಗೊಳ್ಳಬೇಕು. ಪರಿಹಾರ ಕಾರ್ಯಾಚರಣೆಯನ್ನು ತ್ವರಿತಗತಿಯಲ್ಲಿ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಮೀನಾ ನಾಗರಾಜ್ ಮಾತನಾಡಿ, ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಜಿಲ್ಲೆಗೆ ಪ್ರವಾಸಿಗರು ಆಗಮಿಸದಂತೆ ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಲಾಗಿದೆ. ಪ್ರವಾಸಿಗರು ಯಾವುದೇ ಚಾರಣವನ್ನು ಕೈಗೊಳ್ಳದಂತೆ ಮಾಹಿತಿ ನೀಡಲಾಗಿದೆ. ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯನಗಿರಿಗೆ ಹೋಗುವ ರಸ್ತೆ ಹಾನಿಯಾಗಿದ್ದು, ಅಲ್ಲಲ್ಲಿ ಗುಡ್ಡ ಕುಸಿಯುತ್ತಿರುವುದರಿಂದ ಮಳೆ ಕಡಿಮೆಯಾಗುವವರೆಗೂ ಜುಲೈ ೨೨ ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿದೆ. ಮಳೆಯಿಂದ ಗುಡ್ಡ ಕುಸಿತ, ಮರಗಳು ಬೀಳುತ್ತಿವೆ. ಗುಡ್ಡ ಕುಸಿತ, ಮರಗಳು ಬಿದ್ದ ಕಡೆ ತಕ್ಷಣ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಈಗಾಗಲೇ ಬಾರಿ ಮಳೆಯಾಗುತ್ತಿದ್ದು, ಡೆಂಘೆ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಯಾವುದೇ ರೀತಿಯ ಸಾಂಕ್ರಾಮಿಕ ರೋಗ ಹರಡದಂತೆ ಜನರಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅರಿವು ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾಗೃತಿ ಮೂಡಿಸುತ್ತಿದೆ ಎಂದು ಡಿಸಿ ಹೇಳಿದರು.
ಎಸ್‌ಪಿ ವಿಕ್ರಮ ಅಮಟೆ ಮಾತನಾಡಿ, ಹಾಸನ ಜಿಲ್ಲೆಯ ಸಂಪಾಜೆ ರಸ್ತೆಯ ಗುಡ್ಡ ಕುಸಿತದಿಂದಾಗಿ ಆ ರಸ್ತೆಗಳಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಹೀಗಾಗಿ ಬಾರಿ ತೂಕದ ವಾಹನಗಳು ಚಾರ್ಮಾಡಿ ರಸ್ತೆಯ ಮೂಲಕ ಸಂಚರಿಸುತ್ತಿವೆ. ಬಾರಿ ವಾಹನಗಳ ಸಂಚಾರದಿAದ ಅಡಚಣೆಯುಂಟಾಗುತ್ತಿದೆ. ಹಾಗಾಗಿ ಬಾರಿ ವಾಹನಗಳ ಸಂಚಾರವನ್ನು ನಿಷೇಧಿಸುವಂತೆ ಸಚಿವರ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಅಗತ್ಯ ವಸ್ತುಗಳ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲು ತಿಳಿಸಿದರು.
ಬಾರೀ ಮಳೆಯ ಸಂದರ್ಭದಲ್ಲಿ ಶಾಲಾ ಮಕ್ಕಳ ಹಿತದೃಷ್ಟಿಯಿಂದ ರಜೆ ಘೋಷಿಸಲು ಕ್ರಮವಹಿಸುವಂತೆ ತಿಳಿಸಿದ ಸಚಿವರು. ದುರಸ್ಥಿಯಲ್ಲಿರುವ ಹಾಗೂ ಮಳೆಯಿಂದ ಹಾನಿಯಾಗಿರುವ ರಸ್ತೆಗಳಿಗೆ ಸಾರ್ವಜನಿಕರು ಹೋಗದಂತೆ ನಾಮಫಲಕಗಳನ್ನು ಆಳವಡಿಸುವಂತೆ ಸೂಚಿಸಿದರು.
ಸಭೆಯಲ್ಲಿ ಜಿಪಂ ಸಿಇಒ ಕೀರ್ತನಾ, ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net