

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡದಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಅಧಿಕಾರಿಗಳಿಗೆ ಸೂಚಿಸಿದರು.
ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ನೈಋತ್ಯ ರೈಲ್ವೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖಾ ಅಧಿಕಾರಿಗಳೊಂದಿಗೆ ಭಾನುವಾರ ಸಭೆ ನಡೆಸಿದ ಅವರು, ಹುಬ್ಬಳ್ಳಿಯಲ್ಲಿ ನಿರ್ಮಾಣ ಹಂತದಲ್ಲಿರುವ ಫ್ಲೈ ಓವರ್ ಕಾಮಗಾರಿಯ ವೇಗ ಹೆಚ್ಚಿಸಬೇಕು. ಪಿಲ್ಲರ್ಗಳ ನಿರ್ಮಾಣ ಕಾಮಗಾರಿಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಹೈರಾಣಾಗಿದ್ದು, ಪ್ಲೈ ಓವರ್ ಕಮಿಟಿ ನೀಡಿರುವ ಮಾರ್ಗಸೂಚಿಯಂತೆ ಶೀಘ್ರವೇ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಮುಕ್ತಗೊಳಿಸಬೇಕು ಎಂದರು.
ಹುಬ್ಬಳ್ಳಿ-ಧಾರವಾಡ ಬೈ ಪಾಸ್ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಕಾಮಗಾರಿಯ ವೇಗ ಹೆಚ್ಚಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದರು. ಕಲಘಟಗಿ ಸಂರ್ಪಸುವ ರಸ್ತೆ, ಶ್ರೀ ಸಿದ್ಧಾರೂಢ ಸ್ವಾಮೀಜಿ ಮಠದ ಬಳಿ ನಡೆಯುತ್ತಿರುವ ರಸ್ತೆ ಕಾಮಗಾರಿಗಳೆಲ್ಲವನ್ನೂ ಶೀಘ್ರವೇ ಪೂರ್ಣಗೊಳಿಸಬೇಕು ಎಂದು ತಾಕೀತು ಮಾಡಿದರು.
ಹುಬ್ಬಳ್ಳಿ-ವಾರಣಾಸಿ ವೀಕ್ಲಿ ರೈಲನ್ನು ವಾರದಲ್ಲಿ 2 ದಿನ ಓಡಿಸುವ ಕುರಿತು ಹಾಗೂ ಹುಬ್ಬಳ್ಳಿ ರೈಲ್ವೆ ವಿಭಾಗದಲ್ಲಿ ಬರುವ 15 ಅಮೃತ ಭಾರತ ರೈಲ್ವೆ ನಿಲ್ದಾಣಗಳ ಕಾಮಗಾರಿ ತ್ವರಿತಗೊಳಿಸುವಿಕೆ ಬಗ್ಗೆ ಅವರು ರೈಲ್ವೆ ಅಧಿಕಾರಿಗಳೊಂದಿಗೆ ರ್ಚಚಿಸಿದರು.
ಶಾಸಕ ಎಂ. ಆರ್. ಪಾಟೀಲ, ಮಾಜಿ ಎಂಎಲ್ಸಿ ನಾಗರಾಜ ಛಬ್ಬಿ, ಪಾಲಿಕೆಯ ಸದಸ್ಯರಾದ ವೀರಣ್ಣ ಸವಡಿ, ಸಂತೋಷ ಚವ್ಹಾಣ,
ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಜಿಪಂ ಸಿಇಒ ಸ್ವರೂಪ ಟಿ. ಕೆ., ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.