

ವಿಜಯಪುರ: ಮಳೆಯಿಂದ ಹಾನಿಯಾದ-ಹಾನಿಗೊಳಗಾಗುವಂಥ ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಾಡಿಕೆಗಿಂತ ಹೆಚ್ಚಾಗಿ ಮಳೆಯಾಗಿದ್ದು, ಈ ಸಂದರ್ಭದಲ್ಲಿ ಯಾವುದೇ ಮಾನವ ಜೀವಹಾನಿ, ಜಾನುವಾರು ಹಾನಿ, ಮನೆಗಳ ಹಾನಿ, ಬೆಳೆ ಹಾನಿ, ಗೃಹೋಪಯೋಗಿ ವಸ್ತುಗಳ ಹಾನಿ ಹಾಗೂ ಮೂಲ ಸೌಕರ್ಯಗಳ ಹಾನಿಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆಯಿಂದ ಹಾನಿಗೊಳಗಾದಲ್ಲಿ ನಿಯಮಾನುಸಾರ ಕೂಡಲೇ ಪರಿಹಾರ ವಿತರಿಸಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.
ಶಿಥಿಲಾವ್ಯವಸ್ಥೆಯಲ್ಲಿರುವ ಜಿಲ್ಲೆಯ ಅಂಗನವಾಡಿ ಹಾಗೂ ಶಾಲೆ ಕೊಠಡಿಗಳಿದ್ದಲ್ಲಿ ಕೂಡಲೇ ಸುರಕ್ಷಿತ ಕಟ್ಟಡಗಳಿಗೆ ಸ್ಥಳಾಂತರಿಸಲು ಕ್ರಮವಹಿಸಿ ಮಕ್ಕಳ ರಕ್ಷಣೆ ಹಿತದೃಷ್ಟಿಯಿಂದ ಯಾವುದೇ ತೊಂದರೆಯಾಗದಂತೆ ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದ್ದು, ಸಂಬಂಧಿಸಿದ ಎಲ್ಲ ಜಿಲ್ಲಾ ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಮಳೆಯಿಂದಾಗುವ ಹಾನಿಯ ಕುರಿತು ಸಮರೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಅವರು ಸೂಚಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.