ಸಿಂಧುವಳ್ಳಿ ವಸತಿ ಶಾಲೆಗೆ ಸಚಿವ ಮಹದೇವಪ್ಪ ಭೇಟಿ

mysore
Published on

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ನಂಜನಗೂಡು ತಾಲೂಕಿನ ಸಿಂಧುವಳ್ಳಿ ಮುರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.


ಭೋಜನಾಲಯಕ್ಕೆ ತೆರಳಿ ಆಹಾರದ ಗುಣಮಟ್ಟ ಪರಿಶೀಲಿಸಿದ ಸಚಿವರು, ಊಟ ಸೇವಿಸುತ್ತಿದ್ದ ವಿದ್ಯಾರ್ಥಿಗಳಿಂದ ಆಹಾರ ರುಚಿ ಬಗ್ಗೆ ಅಭಿಪ್ರಾಯ ಪಡೆದರು. ಬಳಿಕ ಆಹಾರ ತಯಾರಿಸುವ ಅಡುಗೆ ಕೋಣೆಗೆ ಭೇಟಿ ನೀಡಿ, ಕೋಣೆಯನ್ನು ಶುಚಿಯಾಗಿ ಇಟ್ಟುಕೊಳ್ಳಬೇಕು ಎಂದು ಅಡುಗೆ ಸಿಬ್ಬಂದಿಗೆ ಸೂಚಿಸಿದರು.


ವಿದ್ಯಾರ್ಥಿಗಳಿಗೆ ಗುಣಮಟ್ಟ, ಪೌಷ್ಟಿಕಾಂಶ ಹೊಂದಿರುವ ಆಹಾರ ನೀಡಬೇಕು. ಇಲಾಖೆ ನಿಗದಿಪಡಿಸಿರುವ ಆಹಾರ ಪಟ್ಟಿ ಪ್ರಕಾರವೇ ಉತ್ತಮವಾಗಿ ಆಹಾರಗಳನ್ನು ಸಿದ್ಧಪಡಿಸಬೇಕು. ಈ ವಿಷಯದಲ್ಲಿ ಯಾವುದೇ ವ್ಯತ್ಯಾಸವಾಗಬಾರದು ಎಂದು ನಿಲಯಪಾಲಕರಿಗೆ ಎಚ್ಚರಿಕೆ ನೀಡಿದರು.


ವಿದ್ಯಾರ್ಥಿಗಳು ವಾಸಿಸುವ ಕೊಠಡಿಗಳನ್ನು ಪರಿಶೀಲಿಸಿದ ಸಚಿವರು, ಮಕ್ಕಳಿಗೆ ಅವಶ್ಯಕ ಮೂಲ ಸೌಕರ್ಯಗಳನ್ನು ಒದಗಿಸಿಕೊಡಬೇಕು. ಕೊಠಡಿಗಳಲ್ಲಿ ವಾಸಿಸಲು ಹಾಗೂ ಪಠ್ಯಕ್ಕೆ ಸಂಬಂಧಿಸಿದ ಅಧ್ಯಯನ ಮಾಡಲು ಯಾವುದೇ ಸಮಸ್ಯೆ ಉಂಟಾಗಬಾರದು ಎಂದು ಸಿಬ್ಬಂದಿಗೆ ಸೂಚಿಸಿದರು.


ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸಬೇಕು. ನಿಲಯದ ಶೌಚಗೃಹಗಳು ಅತ್ಯಂತ ಸ್ವಚ್ಛತೆಯಿಂದ ಕೂಡಿರಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳವಂತೆ ಪ್ರೋತ್ಸಾಹಿಸಬೇಕು. ಅವರು ಆಸಕ್ತಿ ಹೊಂದಿರುವ ಕ್ರೀಡೆಗಳಲ್ಲಿ ಸಾಧನೆ ಮಾಡಲು ಪ್ರೇರೇಪಿಸಬೇಕು ಎಂದು ಸಲಹೆ ನೀಡಿದರು.


ಕಲಿಕೆಯಿಂದ ಯಾವುದೇ ಮಕ್ಕಳು ವಂಚಿತರಾಗಬಾರದು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಶಾಲಾ ಮಕ್ಕಳ ಕಲಿಕೆಗೆ ಪೂರಕವಾಗುವ ಎಲ್ಲ ಸೌಕರ್ಯಗಳನ್ನು ಒದಗಿಸಲು ಬದ್ಧವಾಗಿದೆ. ಪ್ರತಿಯೊಬ್ಬರೂ ಶಿಕ್ಷಣ ಪಡೆದು ಜ್ಞಾನವಂತರಾಗಬೇಕೆಂಬುದು ನಮ್ಮ ಸರ್ಕಾರದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.


ಶಾಸಕ ದರ್ಶನ್ ಧ್ರುವನಾರಾಯಣ, ಇಲಾಖೆ ಅಧಿಕಾರಿಗಳು, ಶಾಲೆಯ ಸಿಬ್ಬಂದಿ ಸೇರಿದಂತೆ ಇನ್ನಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net