

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಕಂಚಿನ ಪ್ರತಿಮೆ ಉದ್ಘಾಟನೆಗೆ ಸಂಬಂಧಿಸಿದಂತೆ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿಗಳಿಂದಲ್ಲೂ ಪವಿತ್ರ ಮೃತ್ತಿಕೆ ಸಂಗ್ರಹ ಕಾರ್ಯಕ್ಕೆ ಅ.29 ರಂದು ಚಾಲನೆ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಕಚೇರಿಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ವಾತನಾಡಿ, ಪವಿತ್ರ ಮಣ್ಣು ಸಂಗ್ರಹ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನಡೆಯಬೇಕು. ನಿಯೋಜಿಸಿರುವ ಅಧಿಕಾರಿಗಳು ಯಾವುದೇ ಲೋಪವಿಲ್ಲದಂತೆ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಪವಿತ್ರ ಮಣ್ಣು ಸಂಗ್ರಹಣೆಯ ಸಂದರ್ಭದಲ್ಲಿ ಸಾರ್ವಜನಿಕರು, ಸಂ ಸಂಸ್ಥೆಗಳು, ಜನಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು. ಮೃತ್ತಿಕೆ ಸಂಗ್ರಹಣೆಗೆ ಜಿಲ್ಲೆಗೆ ಎರಡು ರಥಗಳು ಆಗಮಿಸಲಿದ್ದು, ಅ.29ರಂದು ಜಿಲ್ಲಾ ಕೇಂದ್ರದಲ್ಲಿ ಚಾಲನೆ ನೀಡಲಾಗುವುದು. ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಸಂಚರಿಸಿ ನ.7ರಂದು ಸಂಗ್ರಹಿಸುವ ಪವಿತ್ರ ಮಣ್ಣಿಗೆ ಮದ್ದೂರಿನ ಸತ್ಯಾಗ್ರಹ ಸೌಧದಲ್ಲಿ ಪೂಜೆ ಸಲ್ಲಿಸಿ ಬೆಂಗಳೂರಿಗೆ ಕಳುಹಿಸಿಕೊಡಲಾಗುವುದು ಎಂದರು.
ಜಿಲ್ಲಾ ಪಂಚಾಯಿತಿ ಸಿಇಒ ಶಾಂತಾ ಎಲ್.ಹುಲ್ಮನಿ ವಾತನಾಡಿ, ಎರಡು ಅಭಿಯಾನ ರಥಕ್ಕೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯ 233 ಗ್ರಾಮ ಪಂಚಾಯಿತಿಗಳಲ್ಲಿ ಅಭಿಯಾನ ರಥ ಸಂಚರಿಸುವಂತೆ ವಾರ್ಗನಕ್ಷೆ ಸಿದ್ಧಪಡಿಸಲಾಗಿದೆ ಎಂದರು.
ಸಭೆಯಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಸಚಿವ ಕೆ.ಸಿ.ನಾರಾಯಣಗೌಡ, ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ, ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪವಿಭಾಗಾಧಿಕಾರಿಗಳಾದ ಬಿ.ಸಿ.ಶಿವಾನಂದ ಮೂರ್ತಿ, ಆರ್.ಐಶ್ವರ್ಯಾ ಇತರರಿದ್ದರು.