ನೂತನ ಸಚಿವರಾದ ಜಾರಕಿಹೊಳಿ, ಹೆಬ್ಬಾಳ್ಕರ್ ಭವ್ಯ ಮೆರವಣಿಗೆ

IMG-20230528-WA0011.jpg
Published on

ಬೆಳಗಾವಿ: ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಭಾನುವಾರ ಅದ್ದೂರಿಯಾಗಿ ಸ್ವಾಗತಿಸಲಾಯಿತು. ಸಂಜೆ ಇಬ್ಬರು ಸಚಿವದ್ವಯರನ್ನು ತೆರೆದ ವಾಹನದಲ್ಲಿ ನಗರದಲ್ಲಿ ಮೆರವಣಿಗೆ ಮಾಡಲಾಯಿತು.
ಮೊದಲಿಗೆ ಸತೀಶ್ ಜಾರಕಿಹೊಳಿ ಕಿತ್ತೂರಿಗೆ ತೆರಳಿ ಅಲ್ಲಿನ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಬೈಲೂರಿನ ನಿಷ್ಕಲ ಮಂಟಪಕ್ಕೆ ತೆರಳಿ ನಿಜಗುಣಾನಂದ ಸ್ವಾಮೀಜಿ ಆಶೀರ್ವಾದ ಪಡೆದದರು. ಲಕ್ಷ್ಮೀ ಹೆಬ್ಬಾಳ್ಕರ್ ಸುಳೇಭಾವಿ ಮಹಾಲಕ್ಷ್ಮೀ ದೇವಿ ದರ್ಶನ ಪಡೆದು, ನಂತರ ರಾಜಹಂಸಗಡ ಕೋಟೆ ಆವರಣದಲ್ಲಿ ಶಿವಾಜಿ ಮಹಾರಾಜರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಸಂಜೆ ಮಳೆ ನಿಂತ ಮೇಲೆ ತೆರೆದ ವಾಹನದಲ್ಲಿ ನಗರದ ಕಾಂಗ್ರೆಸ್ ಭವನದಿಂದ ಮೆರವಣಿಗೆ ಆರಂಭಿಸಿದರು. ಅಂಬೇಡ್ಕರ್ ಉದ್ಯಾನಕ್ಕೆ ತೆರಳಿ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ನಂತರ ರಾಣಿ ಚನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವ ಸಮರ್ಪಿಸಿದರು. ಈ ವೇಳೆ ಕಾರ್ಯಕರ್ತರು ಸಂಭ್ರಮಿಸಿದರು. ಬಳಿಕ ಧರ್ಮವೀರ ಸಂಭಾಜಿ ಮಹಾರಾಜ, ಶಿವಾಜಿ ಮಹಾರಾಜ, ವಿಶ್ವಗುರು ಬಸವೇಶ್ವರ, ಸಂಗೊಳ್ಳಿ ರಾಯಣ್ಣ ಸೇರಿ ಇನ್ನಿತರ ಮಹಾಪುರುಷರ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.
ಶಾಸಕರಾದ ಬಾಬಾಸಾಹೇಬ ಪಾಟೀಲ, ವಿಶ್ವಾಸ ವೈದ್ಯ, ರಾಜು ಸೇಠ್, ಮಹೇಂದ್ರ ತಮ್ಮಣ್ಣವರ, ಎಂಎಲ್‌ಸಿ ಚನ್ನರಾಜ ಹಟ್ಟಿಹೊಳಿ, ಬೆಳಗಾವಿ ಗ್ರಾಮೀಣ ಅಧ್ಯಕ್ಷ ವಿನಯ ನಾವಲಗಟ್ಟಿ, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಶಾಸಕ ಶಾಮ್ ಘಾಟಗೆ ಇತರಿದ್ದರು.
ನಗರದ ರಾಣಿ ಚನ್ನಮ್ಮ ವೃತ್ತ, ಗೋವಾವೇಸ್‌ನ ಬಸವೇಶ್ವರ ವೃತ್ತ ಬಳಿ ಹಾಗೂ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ಅವರ ದೊಡ್ಡ ಗಾತ್ರದ ಕಟೌಟ್‌ಗಳು ರಾರಾಜಿಸಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net