ಸಚಿವೆ ಶಶಿಕಲಾ ಜೊಲ್ಲೆ ಕೈಬಿಡಲು ಒತ್ತಾಯಿಸಿ ಪ್ರತಿಭಟನೆ

5 smg 19
Published on

ಶಿವಮೊಗ್ಗ: ಭ್ರಷ್ಟಾಚಾರದ ಆರೋಪ ಹೊತ್ತಿರುವ ಶಶಿಕಲಾ ಜೊಲ್ಲೆ ಅವರಿಗೆ ಸಚಿವ ಸ್ಥಾನ ನೀಡಿರುವುದನ್ನು ವಿರೋಧಿಸಿ ಹಾಗೂ ತಕ್ಷಣವೇ ಅವರನ್ನು ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಗುರುವಾರ ಡಿಸಿ ಕಚೇರಿ ಎದುರು ಮೊಟ್ಟೆ ಪ್ರದರ್ಶಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾಗಿದ್ದ ಶಶಿಕಲಾ ಜೊಲ್ಲೆ ಅವರು ಮಕ್ಕಳು ಮತ್ತು ಮಹಿಳೆಯರಿಗೆ ಅಪೌಷ್ಠಿಕತೆ ದೂರ ಮಾಡಲು ಸರ್ಕಾರದಿಂದ ಉಚಿತವಾಗಿ ಮೊಟ್ಟೆ ನೀಡುವ ಟೆಂಡರ್ ಹಂಚಿಕೆಯಲ್ಲಿ ಲಂಚ ಪಡೆದಿದ್ದಾರೆ. ಆದರೂ ನೂತನ ಸಚಿವ ಸಂಪುಟದಲ್ಲಿ ಅವರಿಗೆ ಸ್ಥಾನ ನೀಡಿರುವುದು ಬಿಜೆಪಿ ಪಕ್ಷದ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಬಿಜೆಪಿ ಹೈಕಮಾಂಡ್ ಕೂಡಲೇ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಶಶಿಕಲಾ ಜೊಲ್ಲೆ ಅವರಿಗೆ ಸಚಿವ ಸ್ಥಾನದಿಂದ ಕೆಳಗಿಸಬೇಕು ಎಂದು ಮನವಿ ಮಾಡಿದರು. ಮಹಾನಗರ ಪಾಲಿಕೆ ಪ್ರತಿಪಕ್ಷದ ನಾಯಕಿ ಯಮುನಾ ರಂಗೇಗೌಡ, ಸದಸ್ಯರಾದ ಮೇಹಖ್ ಶರೀಫ್, ರೇಖಾ ರಂಗನಾಥ್, ಎಚ್.ಸಿ.ಯೋಗೀಶ್, ಪ್ರಮುಖರಾದ ಸೇಲ್ವಾ ಮಾರ್ಟಿಸ್, ರೇಷ್ಮಾ, ಸಂಧ್ಯಾ, ಸುವರ್ಣಾ ನಾಗರಾಜ್, ಗೀತಾ ಮತ್ತಿತರರು ಪ್ರತಿಭಟನೆಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net