ಬೆಂ-ಮೈ ಹೆದ್ದಾರಿಯಲ್ಲಿ ಸುರಕ್ಷತೆಗೆ ಒತ್ತು: ಗೃಹ ಸಚವ ಡಾ.ಜಿ.ಪರಮೇಶ್ವರ್ ಮಾಹಿತಿ

18 Dwd 1 (Dr. G.Parameshwar) - Copy
Published on

ಮಂಡ್ಯ: ಬೆಂಗಳೂರು-ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ-275 ಮತ್ತು ಸರ್ವೀಸ್ ರಸ್ತೆಗಳಲ್ಲಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ನಡೆಸಿರುವ 26 ಪ್ರಕರಣದ ಪೈಕಿ 20 ಪ್ರಕರಣಗಳನ್ನು ಬೇಧಿಸಲಾಗಿದೆ. ಮುಖ್ಯವಾಗಿ ಪ್ರಯಾಣಿಕರ ಸುರಕ್ಷತೆಗೆ ಒತ್ತು ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನ ಪರಿಷತ್‌ನಲ್ಲಿ ಸದಸ್ಯ ಮಧು ಜಿ.ಮಾದೇಗೌಡ ಅವರು ಕೇಳಿರುವ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಮಂಡ್ಯ ಜಿಲ್ಲೆಯಲ್ಲಿ 14 ಮತ್ತು ರಾಮನಗರ ಜಿಲ್ಲೆಯಲ್ಲಿ 12 ಸೇರಿದಂತೆ ಒಟ್ಟು 26 ಪ್ರಕರಣ ದಾಖಲಾಗಿವೆ. ಈ ಪೈಕಿ ಮಂಡ್ಯ ಜಿಲ್ಲೆಯಲ್ಲಿ 9 ಹಾಗೂ ರಾಮನಗರದಲ್ಲಿ 11 ಪ್ರಕರಣಗಳನ್ನು ಬೇಧಿಸಲಾಗಿದೆ ಎಂದು ಉತ್ತರಿಸಿದ್ದಾರೆ.

ಐಟಿಎಂಎಸ್ ಕ್ಯಾಮೆರಾ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಆಯ್ದ 12 ಸ್ಥಳಗಳಲ್ಲಿ ಇಂಟಲಿಜೆನ್ಸ್ ಟ್ರಾಫಿಕ್ ಮ್ಯಾನೇಜ್ಮೆಂಟ್ ಸಿಸ್ಟಂ(ಐಟಿಎಂಎಸ್) ಕ್ಯಾಮೆರಾ ಅಳವಡಿಸಲಾಗಿದೆ. ಮಂಡ್ಯ ಜಿಲ್ಲಾ ವ್ಯಾಪ್ತಿಯಲ್ಲಿ 5, ರಾಮನಗರದಲ್ಲಿ 5 ಹಾಗೂ ಮೈಸೂರು ಜಿಲ್ಲೆಯಲ್ಲಿ 2 ಕ್ಯಾಮೆರಾ ಇದೆ. ಇವುಗಳು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡುವ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ಪಾವತಿಸುವ ಬಗ್ಗೆ ಮೊಬೈಲ್‌ಗೆ ಸಂದೇಶವನ್ನು ಕಳುಹಿಸಲಾಗುತ್ತದೆ. ಸೀಟ್ ಬೆಲ್ಟ್ ಧರಿಸಿದ್ದರೂ ಹಾಗೂ ಚಾಲನೆ ಸಂದರ್ಭದಲ್ಲಿ ಮೊಬೈಲ್ ಬಳಸದಿದ್ದರೂ ದಂಡ ವಿಧಿಸಲಾಗುತ್ತಿರುವ ಬಗ್ಗೆ ಸಂಬಂಧಪಟ್ಟ ವಾಹನ ಚಾಲಕರಿಂದ ಸ್ವೀಕೃತವಾಗುವ ದೂರುಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿವರಿಸಿದ್ದಾರೆ.

13,41,940 ಪ್ರಕರಣ ದಾಖಲು: ಸಂಚಾರ ನಿಯಮಗಳನ್ನು ಉಲ್ಲಂಘಿಸಿದಕ್ಕಾಗಿ ಕಳೆದ ಮೂರು ವರ್ಷಗಳಲ್ಲಿ ಒಟ್ಟು 13,41,940 ಪ್ರಕರಣಗಳನ್ನು ದಾಖಲಿಸಲಾಗಿದ್ದು, 90.71 ಕೋಟಿ ರೂ ದಂಡ ವಿಧಿಸಲಾಗಿದೆ. ಇನ್ನೂ 12,67,238 ಪ್ರಕರಣಗಳಿಂದ ರೂ. 85.80 ಕೋಟಿ ದಂಡದ ಮೊತ್ತ ವಸೂಲಾತಿಗೆ ಬಾಕಿ ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಅಂತೆಯೇ ಪೊಲೀಸರು ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬ್ಯಾರಿಕೇಡ್ ಇರಿಸಿ, ವಾಹನಗಳನ್ನು ತಡೆದು ತಪಾಸಣೆ ನಡೆಸಿ ದಂಡ ವಿಧಿಸುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳನ್ನು ತಡೆದು ತಪಾಸಣೆ ನಡೆಸುತ್ತಿಲ್ಲ, ದಂಡವನ್ನೂ ವಿಧಿಸುತ್ತಿಲ್ಲ ಎಂದು ಲಿಖಿತ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net