

ಮಡಿಕೇರಿ: ಕರ್ನಾಟಕ ರಕ್ಷಣಾ ವೇದಿಕೆಯ ಹೆಸರನ್ನು ಕೊಡಗು ಜಿಲ್ಲೆಯಲ್ಲೂ ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ನೀಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ(ಟಿ.ಎ.ನಾರಯಣಗೌಡ) ಮೈಸೂರು ಜಿಲ್ಲಾಧ್ಯಕ್ಷ ಪ್ರವೀಣ್‌ಕುಮಾರ್ ಎಚ್ಚರಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಸಂಘಟನೆಯ ಹೆಸರನ್ನು ಅನಧಿಕೃತ ವ್ಯಕ್ತಿಗಳು ಬಳಸದಂತೆ ಬೆಂಗಳೂರು ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಶಾಶ್ವತ ತಡೆಯಾಜ್ಞೆ ನೀಡಿತ್ತು. ಆದರೂ ಕೆಲವರು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಹೆಸರನ್ನು ದುರುಪಯೋಗ ಮಾಡುತ್ತಿದ್ದಾರೆ. ಕೊಡಗು ಜಿಲ್ಲೆಯಲ್ಲಿಯೂ ಈ ಹೆಸರಿನ ದುರ್ಬಳಕೆ ಕಂಡು ಬಂದ ಹಿನ್ನೆಲೆ ಡಿಸಿ ಮತ್ತು ಎಸ್‌ಪಿ, ವಿವಿಧ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿ ಮಾಹಿತಿ ನೀಡಲಾಗುತ್ತಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಂದಿನ ದಿನಗಳಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ಹೆಸರನ್ನು ಬಳಸಿ ಸಾರ್ವಜನಿಕರಲ್ಲಿ, ಅಧಿಕಾರಿಗಳಲ್ಲಿ ಗೊಂದಲ ಸೃಷ್ಠಿಸಿದ್ದಲ್ಲಿ ಅಂತವರ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮಹಿಳಾ ಘಟಕದ ಸಂಚಾಲಕಿ ದೀಪಾ ಪೂಜಾರಿ, ಚಾಮರಾಜನಗರ ಜಿಲ್ಲಾ ಅಧ್ಯಕ್ಷ ಮಂಜೇಶ್, ಕುಶಾಲನಗರ ತಾಲೂಕು ಅಧ್ಯಕ್ಷ ಅಣ್ಣಯ್ಯ, ಕೊಡಗು ಜಿಲ್ಲಾ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜ್ಯೋತಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಆನಂದ್ ಇದ್ದರು.