

ಪುತ್ತೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ನೀರು ಸರಬರಾಜು ಪ್ರಕ್ರಿಯೆಯಲ್ಲಿ ಹಲವು ಟ್ಯಾಂಕ್‌ಗಳಿಗೆ ಸಂಪರ್ಕ ಕಲ್ಪಿಸದೆ ಕೈಬಿಡಲಾಗಿದೆ. ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ಹೆಚ್ಚಿನ ದಿನ ಕುಡಿಯುವ ನೀರಿನ ಸಮಸ್ಯೆ ಉಂಟಾಗುತ್ತಿದ್ದು, ದಿನದ ೨೪ ಗಂಟೆಯೂ ನೀರು ಪೂರೈಕೆ ಮಾಡುವಲ್ಲಿ ಈಗಿನ ವ್ಯವಸ್ಥೆ ಸಮರ್ಪಕವಾಗಿಲ್ಲ. ಇದನ್ನು ಸರಿಪಡಿಸುವ ಕಾರ್ಯವಾಗಬೇಕೆಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜು ಪರ್ವೇಜ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಗೆ ಸುಮಾರು ೪೯ ನೀರಿನ ಟ್ಯಾಂಕ್‌ಗಳಿದ್ದು, ಇದೆಲ್ಲದಕ್ಕೂ ನೀರು ಪೂರೈಕೆ ಮಾಡುವ ಯೋಜನೆಯನ್ನು ಹಾಕಿಕೊಳ್ಳಲಾಗಿತ್ತು. ಆದರೆ ಕಾಮಗಾರಿಯಲ್ಲಿ ಬದಲಾವಣೆ ಮಾಡಿ ೩.೫ ಲಕ್ಷ ಲೀಟರ್ ಸಾಮರ್ಥ್ಯದ ಒಂದೇ ಟ್ಯಾಂಕ್‌ಗೆ ನೀರು ತುಂಬಿಸಲು ವ್ಯವಸ್ಥೆ ಮಾಡಲಾಗಿದೆ. ಇಂತಹ ಅವ್ಯವಸ್ಥೆಯಿಂದ ವಿಟ್ಲದಲ್ಲಿ ಯೋಜನೆ ಜಾರಿಗೊಳಿಸಿಯೂ ಪ್ರಯೋಜನವಿಲ್ಲದ ಸ್ಥಿತಿ ನಿರ್ಮಾಣವಾಗಲಿದೆ. ಈ ಹಿಂದೆ ಡಿ.ಪಿ.ಎ.ಆರ್‌ನಲ್ಲಿ ತಿಳಿಸಿರುವಂತೆ ೪೯ ನೀರಿನ ಟ್ಯಾಂಕ್‌ಗಳಿಗೆ ನೀರು ಪೂರೈಸುವ ಕಾಮಗಾರಿಯನ್ನು ನಡೆಸಬೇಕು. ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಮೂಲಕವೇ ಅಗತ್ಯ ಅನುದಾನ ನೀಡಿ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೀರಿನ ಟ್ಯಾಂಕ್‌ಗಳಿಗೆ ನೀರು ಸರಬರಾಜು ಮಾಡಲು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮುಖ್ಯ ಇಂಜನಿಯರ್ ಎಜಾಜ್ ಹುಸೇನ್ ಜತೆಗೂ ಶಾಸಕರು ಮಾತುಕತೆ ನಡೆಸಿದರು.
ವಿಟ್ಲ ಪಟ್ಟಣ ಪಂಚಾಯಿತಿಗೆ ಕುಡಿಯುವ ನೀರಿನ ಸರಬರಾಜಿಗೆ ೧೦೦ ಕೋಟಿ ರೂ.ಅನುದಾನ ಮೀಸಲಿಡಲಾಗಿತ್ತು. ಈ ಯೋಜನೆಯನ್ವಯ ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರು ವಿತರಣೆಗೆ ೩.೫ ಲಕ್ಷ ಲೀಟರ್‌ನ ಟ್ಯಾಂಕ್ ನಿರ್ಮಾಣ ಮಾಡಿ ಅದರ ಮೂಲಕ ನೀರು ಪೂರೈಕೆ ಮಾಡಲು ಯೋಜನೆ ಸಿದ್ಧಪಡಿಸಲಾಗಿತ್ತು. ಇದರಿಂದ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ದಿನದ ೨೪ ಗಂಟೆ ನೀರು ಪೂರೈಕೆ ಅಸಾಧ್ಯ. ಈ ವ್ಯಾಪ್ತಿಯ ಸುಮಾರು ೪೯ ಟ್ಯಾಂಕ್‌ಗೆ ನೀರು ತುಂಬಿಸಿ ಅದರ ಮೂಲಕ ಎಲ್ಲ ಮನೆಗಳಿಗೂ ನೀರು ಪೂರೈಕೆಗೆ ವ್ಯವಸ್ಥೆ ಮಾಡುವಂತೆ ಯೋಜನೆಯಲ್ಲಿ ಬದಲಾವಣೆಯ ಬಗ್ಗೆ ಇಲಾಖೆಯ ಗಮನಕ್ಕೆ ತಂದಿದ್ದೇನೆ.
| ಅಶೋಕ್ ಕುಮಾರ್ ರೈ, ಶಾಸಕರು ಪುತ್ತೂರು