

ಮಂಡ್ಯ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಂದ ಸಂದರ್ಭದಲ್ಲಿ ಬರದಿಂದ ಕೂಡಿರುತ್ತದೆ. ಇದರಿಂದ ಜನಸಾಮಾನ್ಯರು ಬದುಕುವುದು ಕಷ್ಟವೆಂದು ಟೀಕೆ ಮಾಡುವವರಿಗೆ ಪ್ರಕೃತಿಯೇ ಉತ್ತರ ನೀಡುತ್ತಿದೆ. ರಾಜ್ಯದ ಎಲ್ಲೆಡೆ ಉತ್ತಮ ಮಳೆಯಾಗುತ್ತಿದೆ ಎಂದು ಶಾಸಕ ರವಿಕುಮಾರ್ ಗಣಿಗ ಹೇಳಿದರು.
ತಾಲೂಕಿನ ವಿವಿಧೆಡೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕೆಆರ್‌ಎಸ್ ಅಣೆಕಟ್ಟೆಯಲ್ಲಿ 95 ಅಡಿಯಷ್ಟು ನೀರು ಸಂಗ್ರಹವಾಗಿದೆ. ಆದ್ದರಿಂದ ರೈತರು ಯಾವುದೇ ರೀತಿಯ ಅತಂಕ ಪಡಬೇಕಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪಣತೊಟ್ಟು ಕೆಲಸ ಮಾಡುತ್ತಿದ್ದಾರೆ ಎಂದರು.
ನಮ್ಮ ಸರ್ಕಾರ ದೀನ ದಲಿತರ ಹಾಗೂ ಬಡವರ ಮತ್ತು ರೈತರ ಪರವಾಗಿ ಕೆಲಸ ಮಾಡುತ್ತಿದೆ. ಪ್ರತಿದಿನವೂ ಅಭಿವೃದ್ಧಿ ಕೆಲಸಕ್ಕೆ ಚಾಲನೆ ನೀಡಲಾಗುತ್ತಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ನನ್ನ ಕ್ಷೇತ್ರ ವ್ಯಾಪ್ತಿಯಲ್ಲಿ ರೈತರ ಬೇಸಾಯಕ್ಕೆ ಅನುಕೂಲ ಹಾಗೂ ರೀತಿಯಲ್ಲಿ ಸಮರ್ಪಕ ನೀರು ನಿರ್ವಹಣೆಗಾಗಿ ನಾಲೆಗಳ ಅಭಿವೃದ್ಧಿ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದರು.
ಮಂಡ್ಯ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಿ.ತ್ಯಾಗರಾಜು, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ ಇತರರಿದ್ದರು.
ಇದೇ ವೇಳೆ ದೊಡ್ಡಕೊತ್ತಗೆರೆ ಗ್ರಾಮದಲ್ಲಿ ಅಂದಾಜು 25 ಲಕ್ಷ ರೂ ವೆಚ್ಚದಲ್ಲಿ ಅಂಗನವಾಡಿ ಕಟ್ಟಡಕ್ಕೆ ಶಂಕುಸ್ಥಾಪನೆ, ದೊಡ್ಡ ಗರುಡನ ಹಳ್ಳಿ ಪಂಚಾಯಿತಿ ವ್ಯಾಪ್ತಿಯ ಚಾಕನಹಳ್ಳಿ ಗ್ರಾಮದ ಕಾಲನಿಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿ,ಬಾಳೇನಹಳ್ಳಿ ಗ್ರಾಮದಿಂದ ಮಾಚಗೌಡನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು 4,55 ಕೋಟಿ ರೂ ವೆಚ್ಚದ ಅಭಿವೃದ್ಧಿಗೆ ಭೂಮಿ ಪೂಜೆ ನೆರವೇರಿಸಿದರು. ಅಂತೆಯೇ ನಗರಸಭಾ ವ್ಯಾಪ್ತಿಯ 7ನೇ, 16, 17 ಹಾಗೂ 18ನೇ ವಾರ್ಡ್‌ನಲ್ಲಿ ತಲಾ 25 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಯಿತು.