

ಮಂಡ್ಯ: ಧಾರ್ಮಿಕ ಕಾರ್ಯ ಮುಗಿಸಿ ಸ್ವಗ್ರಾಮಕ್ಕೆ ಮರಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ ಹೊಡೆದು ಮಳವಳ್ಳಿ ತಾಲೂಕು ತಮ್ಮಡಹಳ್ಳಿ ಗ್ರಾಮದ 35ಕ್ಕೂ ಹೆಚ್ಚು ಜನ ಗಾಯಗೊಂಡಿದ್ದ ಹಿನ್ನೆಲೆಯಲ್ಲಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಿಮ್ಸ್‌ಗೆ ಭೇಟಿ ನೀಡಿದರು.
ಬಸವನಬೆಟ್ಟದ ದೇವಸ್ಥಾನಕ್ಕೆ ಹೋಗಿದ್ದು ಪೂಜೆ ಹಾಗೂ ಊಟ ಮುಗಿಸಿಕೊಂಡ ವಾಪಸ್ಸು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿತ್ತು. ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಹಲಗೂರು ಪೋಲೀಸರು ಗಾಯಗೊಂಡ ಜನರನ್ನು ಕೂಡಲೇ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ಕೊಡಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಿಮ್ಸ್‌ಗೆ ರವಾನಿಸಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಮೂರು ವಾರ್ಡ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡುವಲ್ಲಿ ಶ್ರಮಿಸಿದ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮೋಹನ್, ಮಿಮ್ಸ್ ನಿರ್ದೇಶಕ ಡಾ.ಮಹೇಂದ್ರ ಹಾಗೂ ವೈದ್ಯರ ತಂಡ, ಶುಶ್ರೂಷಕರು ಹಾಗೂ ವೈದ್ಯಕೀಯ ವಿದ್ಯಾರ್ಥಿಗೆ ಧನ್ಯವಾದ ಅರ್ಪಿಸಿದ ಶಾಸಕರು, ಸಮರೋಪಾದಿಯಲ್ಲಿ ತುರ್ತು ಚಿಕಿತ್ಸೆ ನೀಡುವಲ್ಲಿ ಯಶಸ್ವಿಯಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು.
ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಇಬ್ಬರು ಗಾಯಾಳುಗಳನ್ನು ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಲು ವ್ಯವಸ್ಥೆ ಮಾಡುವಂತೆ ಸೂಚಿಸಿದರು. ಗಾಯಾಳುಗಳ ಸಂಬಂಧಿಕರಿಗೆ ಧೈರ್ಯ ತುಂಬಿ ಅಗತ್ಯ ಬಿದ್ದರೆ ದೂರವಾಣಿ ಮೂಲಕ ಮಾಹಿತಿ ನೀಡುವಂತೆ ಸೂಚಿಸಿದರು. ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ಅಗತ್ಯ ನೆರವು ಕಲ್ಪಿಸುವ ಭರವಸೆ ನೀಡಿದರು.
ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯ್ ಕುಮಾರ್, ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಲಹಳ್ಳಿ ಅಶೋಕ್ ಇತರರಿದ್ದರು.