ಅಭಿವೃದ್ಧಿ ಕೆಲಸಗಳಿಂದ ಜನರ ಋಣ ತೀರಿಸುವೆ

mla program
Published on


ವಿಜಯವಾಣಿ ಸುದ್ದಿಜಾಲ ಆನೇಕಲ್
ಚುನಾವಣೆಯಲ್ಲಿ ಆಶೀರ್ವಾದ ಮಾಡಿದ ಜನರ ಋಣವನ್ನು ಅಭಿವೃದ್ಧಿ ಕಾರ್ಯಗಳ ಮೂಲಕ ತೀರಿಸುವ ಸಂಕಲ್ಪ ಮಾಡಿದ್ದೇನೆ ಎಂದು ಶಾಸಕ ಬಿ.ಶಿವಣ್ಣ ಹೇಳಿದರು.
ಪಟ್ಟಣದಲ್ಲಿ ಬ್ಲಾಕ್ ಕಾಂಗ್ರೆಸ್‌ನಿಂದ ಆಯೋಜಿಸಿದ್ದ ಮತದಾರರಿಗೆ ಕೃತಜ್ಞತೆ ಕಾರ್ಯಕ್ರಮ ಮತ್ತು ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಾಸಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಈ ಹಿಂದೆ ಆಡಳಿತದಲ್ಲಿದ್ದ ಬಿಜೆಪಿ ಸರ್ಕಾರ ಅನುದಾನ ನೀಡುವಲ್ಲಿ ತಾರತಮ್ಯ ಮಾಡಿದ್ದರಿಂದ ಕ್ಷೇತ್ರದಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳನ್ನು ಪೂರ್ಣಪ್ರಮಾಣದಲ್ಲಿ ಜಾರಿಗೆ ತರಲಾಗಲಿಲ್ಲ. ಈ ಬಾರಿ ರಾಜ್ಯದ ಜನತೆ ಕಾಂಗ್ರೆಸ್ ಮೇಲೆ ನಂಬಿಕೆಯಿಟ್ಟು 135 ಕ್ಷೇತ್ರದಲ್ಲಿನ ಅಭ್ಯರ್ಥಿಗಳನ್ನು ಗೆಲ್ಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರವಿರುವುದರಿಂದ ಕ್ಷೇತ್ರದಲ್ಲಿ ಅಭಿವೃದ್ಧಿಗೆ ಬಲ ನೀಡಲಾಗುವುದು ಎಂದರು.
ಆನೇಕಲ್ ತಾಲೂಕಿನ ಚಂದಾಪುರ, ಅತ್ತಿಬೆಲೆ, ಬನ್ನೇರುಘಟ್ಟ ಮುಖ್ಯರಸ್ತೆಗಳನ್ನು ದ್ವಿಪಥದ ರಸ್ತೆಯಾಗಿ ಮೇಲ್ದರ್ಜೆಗೇರಿಸಲಾಗುವುದು. ತಾಲೂಕಿನಲ್ಲಿರುವ ಗ್ರಾಮಗಳಿಗೆ ಕಾವೇರಿ ಕುಡಿಯುವ ನೀರಿನ ಪೂರೈಕೆ ಮಾಡಲಾಗುವುದು. ಅಂತರ್ಜಲ ವೃದ್ಧಿಗಾಗಿ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣದಲ್ಲಿ ಮಿನಿ ವಿಧಾನಸೌಧ, ಸುಸಜ್ಜಿತ ಕ್ರೀಡಾಂಗಣ ಅಭಿವೃದ್ಧಿ ಪಡಿಸಲಾಗುವುದು.13 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಅಂಬೇಡ್ಕರ್ ಭವನವನ್ನು ಶೀಘ್ರ ಉದ್ಘಾಟನೆ ಮಾಡಲಾಗುವುದು ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಎನ್.ಎಸ್.ಪದ್ಮನಾಭ ಮಾತನಾಡಿ, ಆನೇಕಲ್ ಜನರ ಬಹುದಿನಗಳ ಕನಸಾಗಿದ್ದ ಥಳಿ ರಸ್ತೆ ವಿಸ್ತರಣೆಗೆ ಚಾಲನೆ ನೀಡಲಾಗಿದೆ ಎಂದರು. ಮುಖಂಡರಾದ ಬಿ.ಪಿ.ರಮೇಶ್, ಮಲ್ಲಿಕಾರ್ಜುನ್, ಹೇಮಲತಾ ಸುರೇಶ್, ಚಂದ್ರಿಕಾ ಹನುಮಂತರಾವ್, ಮುರಳಿ, ಕೆ.ಶ್ರೀನಿವಾಸ್, ಶೈಲೇಂದ್ರಕುಮಾರ್, ಬಾಬು, ಸತ್ಯ, ನವೀನ್ ಕುಮಾರ್, ಗಣೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net