ರಾಜಕೀಯ ಲಾಭಕ್ಕಾಗಿ ಬಿಜೆಪಿ ಪ್ರತಿಭಟನೆ: ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಟೀಕೆ

1
Published on

ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕಾದದ್ದು ನಮ್ಮ ಕರ್ತವ್ಯ. ಅದರಂತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡಲಾಗಿದೆ. ಆದರೆ ರಾಜಕೀಯ ಲಾಭಕ್ಕಾಗಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ಟೀಕಿಸಿದರು.

ಕರ್ನಾಟಕ, ಪಾಂಡಿಚೇರಿ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಗೆ ನೀರು ಹಂಚಿಕೆಗೆ ಸಂಬಂಧಿಸಿದಂತೆ ಸಮಿತಿ ನಿರ್ಧರಿಸಿದಂತೆ ನೀರು ನಿರ್ವಹಣೆ ಮಾಡಬೇಕಾಗುತ್ತದೆ. ಇಲ್ಲದಿದ್ದರೆ ಸುಪ್ರೀಂಕೋರ್ಟ್ ಮತ್ತು ಕಾವೇರಿ ಪ್ರಾಧಿಕಾರದ ತೀರ್ಮಾನದಂತೆ ನೀರು ಬಿಡಬೇಕಾಗುತ್ತದೆ. ತ.ನಾಡು ಸುಪ್ರೀಂಕೋರ್ಟ್ ಮೊರೆ ಹೋಗಿರುವುದರಿಂದ ಹೆಚ್ಚಿನ ನೀರು ಬಿಡುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬಿಜೆಪಿಯವರು ಚುನಾವಣೆ ಬಂತೆಂದು ಪ್ರತಿಭಟನೆ ಮಾಡುತ್ತಿರಬಹುದು. ಮೂರು ತಿಂಗಳ ಹಿಂದೆ ಬಿಜೆಪಿ ಸರ್ಕಾರವಿತ್ತು. ಆಗಲೇ ನೀರು ಬಿಡಲು ಸಾಧ್ಯವಿಲ್ಲ ಎನ್ನುವ ಮಾತನ್ನ ಹೇಳಬಹುದಿತ್ತು. ಈಗ ಪ್ರತಿಭಟನೆ ನಡೆಸುತ್ತಿರುವ ಸಂಸದೆ, ಈ ಹಿಂದೆ ಎಷ್ಟು ಸಲ ನೀರಿಗಾಗಿ ಹೋರಾಟ ಮಾಡಿದ್ದರು. ಈಗಲೂ ಕಾಲ ಮಿಂಚಿಲ್ಲ. ನೀವು ರಾಜ್ಯದ ಬಿಜೆಪಿ ಸಂಸದರ ಜತೆ ಕೇಂದ್ರದ ಮೇಲೆ ಒತ್ತಡ ಹೇರಿ ನೀರು ಬಿಡುವುದನ್ನು ನಿಲ್ಲಿಸಲಿ ಎಂದು ಸವಾಲು ಹಾಕಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚಲುವರಾಯಸ್ವಾಮಿ ಅವರ ಮೇಲಿನ ದ್ವೇಷದಿಂದ ಕೃಷಿ ಅಧಿಕಾರಿಗಳ ಪತ್ರದ ವಿಷಯವನ್ನು ದೊಡ್ಡದು ಮಾಡುತ್ತಿದ್ದಾರೆ. ಇವರು ತಮಗಿರುವ ಮಾಹಿತಿಯನ್ನು ಸಿಐಡಿ ಅಧಿಕಾರಿಗಳಿಗೆ ಕೊಡುವುದು ಒಳ್ಳೆಯದು. ಮಂಡ್ಯ ಅಧಿಕಾರಿಗಳ ಹೆಸರಿನಲ್ಲಿ ಮೈಸೂರಿನ ಅಧಿಕಾರಿಗಳು ಪತ್ರ ಬರೆದು ಸಹಿ ಮಾಡಿದ್ದರೆ ಅಪರಾಧ. ಈ ವಿಚಾರದಲ್ಲಿ ಅಸೂಯೆ ಮತ್ತು ದ್ವೇಷದ ರಾಜಕಾರಣಕ್ಕೆ ಮುಂದಾಗುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ, ಖಜಾಂಚಿ ಹಾಲಹಳ್ಳಿ ಅಶೋಕ್, ಜಿಪಂ ಮಾಜಿ ಅಧ್ಯಕ್ಷ ಸುರೇಶ್ ಕಂಠಿ, ವಕ್ತಾರ ಸಿ.ಎಂ. ದ್ಯಾವಪ್ಪ, ಯುವ ಘಟಕದ ಅಧ್ಯಕ್ಷ ವಿಜಯಕುಮಾರ್, ನಗರಸಭಾ ಸದಸ್ಯ ನಹೀಂ, ಹಿಂದುಳಿದ ವರ್ಗದ ಅಧ್ಯಕ್ಷ ಕೃಷ್ಣ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net