

ಮೈಸೂರು: ಓದಿನ ಜತೆಗೆ ಕ್ರೀಡೆ, ಸಾಹಿತ್ಯ, ಸಂಗೀತ, ನೃತ್ಯ, ಯೋಗ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅದರಲ್ಲೂ ಕೂಡ ಯಶಸ್ಸು ಗಳಿಸಬೇಕು ಎಂದು ಶಾಸಕ ಟಿ.ಎಸ್.ಶ್ರೀವತ್ಸ, ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಲಕ್ಷ್ಮೀಪುರಂ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ವಿದ್ಯಾರ್ಥಿ ವೇದಿಕೆ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಒಬ್ಬ ವಿದ್ಯಾರ್ಥಿನಿ ವಿದ್ಯಾವಂತಳಾದರೆ ಇಡೀ ಕುಟುಂಬವೇ ಅಕ್ಷರಸ್ಥರ ಕುಟುಂಬವಾಗುತ್ತದೆ. ಹಾಗಾಗಿ ಹೆಣ್ಣು ಮಕ್ಕಳು ಎಂದು ತಾತ್ಸಾರ ಮಾಡದೆ ಎಲ್ಲರಿಗೂ ಶಿಕ್ಷಣ ದೊರೆಯುವಂತಾಗಬೇಕು. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಶಿಕ್ಷಣ ಇಲಾಖೆಯಲ್ಲಿ ಪ್ರಸ್ತುತ ಶಾಲಾ, ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಗಣನೀಯ ಸಾಧನೆ ಮಾಡುತ್ತಿರುವುದು ಮೆಚ್ಚತಕ್ಕ ವಿಚಾರ. ಅದರಲ್ಲೂ ವಿದ್ಯಾರ್ಥಿನಿಯರು ಗಣನೀಯ ಪ್ರಮಾಣದಲ್ಲಿ ಸಾಧನೆ ಮಾಡುತ್ತಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮರಿಸ್ವಾಮಿ ಮಾತನಾಡಿ, ವಿದ್ಯಾರ್ಥಿ ವೃಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಪರಿಶ್ರಮ ಹಾಗೂ ತಾಳ್ಮೆ ಮುಖ್ಯ. ಯಾವುದೇ ಸಮಯದಲ್ಲಿಯೂ ಪರಿಶ್ರಮ, ತಾಳ್ಮೆ ಕಳೆದುಕೊಳ್ಳಬೇಡಿ ಎಂದರು.
ಬನುಮಯ್ಯ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ಬಸವರಾಜು ಮಾತನಾಡಿ, ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು. ಹಿರಿಯರು ಹಾಕಿಕೊಟ್ಟಿರುವ ತತ್ವಾದರ್ಶವನ್ನು ಪಾಲಿಸಬೇಕು ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಟಿ.ಸಿ.ಸುದೀಪ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾಲೇಜಿನ ಹಿರಿಯ ಉಪನ್ಯಾಸಕ ಎನ್.ಎಸ್‌ಪಶುಪತಿ, ಉಪನ್ಯಾಸಕರಾದ ಪುಷ್ಪಾ, ಬಿ.ಎಂ. ಮಹದೇವನಾಯಕ ಇತರರು ಇದ್ದರು. ಕಾರ್ಯಕ್ರಮದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು.