ಅಧಿಕಾರಿಗಳ ಕಾರ್ಯವೈಖರಿಗೆ ಶಾಸಕ ಟೆಂಗಿನಕಾಯಿ ಅಸಮಾಧಾನ

New Tenginakayi New
Published on

ಹುಬ್ಬಳ್ಳಿ : ಇಲ್ಲಿನ ಉಣಕಲ್ಲ ಕ್ರಾಸ್​ನಿಂದ ಪ್ರೆಸಿಡೆಂಟ್ ಹೋಟೆಲ್​ವರೆಗಿನ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಅಗತ್ಯವಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ನಿಧಾನಗತಿಯಲ್ಲಿ ನಡೆಸುತ್ತಿರುವ ಪಾಲಿಕೆ ಅಧಿಕಾರಿಗಳ ವಿರುದ್ಧ ಶಾಸಕ ಮಹೇಶ ಟೆಂಗಿನಕಾಯಿ ಅಸಮಾಧಾನ ವ್ಯಕ್ತಪಡಿಸಿದರು.

ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, 2023 ರಲ್ಲಿ ಆರಂಭಗೊಂಡಿರುವ ಈ ಪ್ರದೇಶದ ಕಾಂಕ್ರಿಕಟ್ ರಸ್ತೆ ಕಾಮಗಾರಿಗೆ ಅಗತ್ಯ ಇರುವ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಕೆಲಸವನ್ನು ಪಾಲಿಕೆ ಅಧಿಕಾರಿಗಳು ಇದುವರೆಗೂ ಪೂರ್ಣಗೊಳಿಸಿಲ್ಲ. 2024ರೊಳಗೆ ಈ ಕಾಮಗಾರಿ ಪೂರ್ಣಗೊಳಿಸುವುದಾಗಿ ರಾಷ್ಟ್ರೀಯ ಹೆದ್ದಾರಿ ನಿಗಮದವರು ಹೇಳುತ್ತಿದ್ದಾರೆ. ಆದರೆ, ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ ನಿಗದಿತ ಅವಧಿಯಲ್ಲಿ ಕಾಮಗಾರಿ ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಿತ್ಯ ಸಾವಿರಾರು ವಾಹನಗಳು ಈ ರಸ್ತೆಯಲ್ಲಿ ಸಂಚುರಿಸುತ್ತಿವೆ. ನಿಧಾನಗತಿಯ ಕಾಮಗಾರಿಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಜನರಿಗೆ ಉತ್ತರ ಕೊಡುವುದೇ ಕೆಲಸವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದುವರೆಗೆ ಕೇವಲ ಅರ್ಧದಷ್ಟು ಮಾತ್ರ ಕಾಂಕ್ರೀಟ್ ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ರಸ್ತೆ ಅಗಲೀಕರಣಕ್ಕೆ ಬೇಕಾದ ಭೂಮಿಯನ್ನು ವಶಪಡಿಸಿಕೊಂಡು, ಫಲಾನುಭವಿಗಳಿಗೆ ಸೂಕ್ತ ಪರಿಹಾರ ಒದಗಿಸಬೇಕು. ಆಗಷ್ಟ್ 14ರೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಶಾಸಕ ಟೆಂಗಿನಕಾಯಿ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

ವಿಶ್ವೇಶ್ವರನಗರದ ರಕ್ಷಣಾ ಇಲಾಖೆಗೆ ಸೇರಿದ ಜಾಗದ ಅಭಿವೃದ್ಧಿ, ಉಣಕಲ್ಲನ ಶ್ರೀ ಚಂದ್ರಮೌಳೇಶ್ವರ ದೇವಸ್ಥಾನದ ಅಭಿವೃದ್ಧಿ ಕುರಿತು ಸಭೆಯಲ್ಲಿ ರ್ಚಚಿಸಲಾಯಿತು.

ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ನಿಗದಿತ ಅವಧಿಯಲ್ಲಿ ಕೆಲಸ ಮಾಡದಿದ್ದರೆ ಕಂದಾಯ ಇಲಾಖೆ ಅಧಿಕಾರಿಗಳಿಂದ ಮಾಡಿಸುವುದಾಗಿ ಪಾಲಿಕೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಪಾಲಿಕೆ ಸದಸ್ಯರು ಸಹ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಪಾಲಿಕೆ ಸದಸ್ಯರಾದ ರಾಜಣ್ಣ ಕೊರವಿ, ತಿಪ್ಪಣ್ಣ ಮಜ್ಜಗಿ, ಉಮೇಶ್ ಗೌಡ ಕೌಜಗೇರಿ, ಜಿಲ್ಲಾ ನೋಂದಣಿ ಅಧಿಕಾರಿ ಶಾಲಾಮ್ ಹುಸೇನ್, ಹುಬ್ಬಳ್ಳಿ ಶಹರ ತಹಸಿಲ್ದಾರ ಕಲ್ಲನಗೌಡ ಪಾಟೀಲ, ಪಾಲಿಕೆ ಅಧಿಕಾರಿ ತಿಮ್ಮಪ್ಪ, ವಲಯ 5ರ ಸಹಾಯಕ ಆಯುಕ್ತ ಇಂಗಳಹಳ್ಳಿ, ಬಿಜೆಪಿ ಮುಖಂಡ ರವಿ ನಾಯಕ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net