

ವಿಜಯವಾಣಿ ಸುದ್ದಿಜಾಲ ಉಡುಪಿ
ದೇಶದ ಬೆನ್ನುಲುಬಾದ ರೈತಾಪಿ ವರ್ಗದ ಅಭಿವೃದ್ಧಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವಾರು ಯೋಜನೆ ಜಾರಿಗೊಳಿಸಿದೆ. ಎಲ್ಲ ಯೋಜನೆಗಳ ಮಾಹಿತಿ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಅರಿವು
ಕಾರ್ಯಕ್ರಮ ಪ್ರಯೋಜನಕಾರಿಯಾಗಿದೆ ಎಂದು ಶಾಸಕ ಯಶ್ಪಾಲ್ ಸುವರ್ಣ ಅಭಿಪ್ರಾಯಪಟ್ಟರು.
ಉಡುಪಿಯ ಜಿಪಂ ಕಚೇರಿಯ ಡಾ. ವಿ.ಎಸ್. ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಜಿಪಂ ವತಿಯಿಂದ ಸೆಪ್ಟೆಂಬರ್ 2ರಂದು ಆಯೋಜಿಸಿದ್ದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆ (ಪಿಎಂಎಫ್ಎಂಇ)ಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಗರಸಭಾಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ರಾಜು, ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಎಂ.ಸಿ. ರೆಡ್ಡಪ್ಪ, ಲೀಡ್ ಬ್ಯಾಂಕ್ನ ಸುಮನ್, ಕೆಪೆಕ್ನ ಅರವಿಂದ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಸೂರಜ್ ಶೆಟ್ಟಿ, ವೆಂಕಟೇಶ ನಾಯ್ಕ, ರಾಜೇಶ ಡಿ.ಪಿ., ರೂಪಾಶ್ರೀ ಹಾಗೂ ಡಾ. ಫಜಲ್ ಪಾಲ್ಗೊಂಡು ಯೋಜನೆಯ ಮಾಹಿತಿ ನೀಡಿದರು.
ಕೃಷಿ ಇಲಾಖೆಯ ಅಧಿಕಾರಿ ಶ್ರೀರಾಮ್ ಹೆಗಡೆ ವಂದಿಸಿದರು. ಸಹಾಯಕ ಕೃಷಿ ನಿರ್ದೇಶಕ (ಕೇಂದ್ರ) ಸತೀಶ ಬಿ. ಕಾರ್ಯಕ್ರಮ ನಿರೂಪಿಸಿದರು.
ಜಿಲ್ಲಾ ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ ನಾಯಕ ಮಾತನಾಡಿ, ಪಿಎಂಎಫ್ಎಂಇ ಯೋಜನೆಯ ಮಾಹಿತಿ ನೀಡಿದರು. ಕೇಂದ್ರ ಸರ್ಕಾರದ 6 ಲಕ್ಷ ರೂ., ರಾಜ್ಯ ಸರ್ಕಾರದಿಂದ 9 ಲಕ್ಷ ರೂ. ಸಹಾಯಧನ ನೀಡಲಾಗುವುದು. ಶೇ.50ರಷ್ಟು ಅಥವಾ ಗರಿಷ್ಠ 15 ಲಕ್ಷ ರೂ. ಸಹಾಯಧನ ನೀಡಲಾಗುವುದು. ಈವರೆಗೂ ಯೋಜನೆಯಡಿಯಲ್ಲಿ ರಾಜ್ಯದಲ್ಲಿ 6,500ಕ್ಕೂ ಹೆಚ್ಚು ಉದ್ದಿಮೆದಾರರಿಗೆ ಸಾಲ ಮಂಜೂರಾಗಿದೆ. 2025-26ನೇ ಸಾಲಿನ ಆಯ-ವ್ಯಯದಲ್ಲಿ 5 ಸಾವಿರ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳಿಗೆ 206 ಕೋಟಿ ರೂ. ಅನುದಾನ ಘೋಷಣೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ ಈವರೆಗೆ 374 ವಿವಿಧ ಉದ್ದಿಮೆದಾರರಿಗೆ ಆರ್ಥಿಕ ನೆರವು ನೀಡಲಾಗಿದ್ದು, ಪ್ರಸ್ತುತ 43 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು.
ಯುವಜನರು ಸರ್ಕಾರಿ ಹುದ್ದೆಗಳಿಗೆ ಅವಲಂಬಿತರಾಗದೇ ಕೃಷಿ ಕ್ಷೇತ್ರದಲ್ಲೂ ತೊಡಗಿಸಿಕೊಳ್ಳಬೇಕು. ರೈತರೂ ಸಹ ಉದ್ದಿಮೆ ನಡೆಸುವಂತಾಗಬೇಕು. ಆ ನಿಟ್ಟಿನಲ್ಲಿ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳು ಪ್ರಯೋಜನಕಾರಿಯಾಗಿದೆ. | ಯಶ್ಪಾಲ್ ಸುವರ್ಣ. ಶಾಸಕ