ಕುಡಿಯುವ ನೀರಿನ ಸಮರ್ಪಕ ಪೂರೈಕೆಗೆ ಸೂಚನೆ

udp-20-yashpal
Published on

ಉಡುಪಿ: ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಪೂರೈಕೆಗೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆದ್ಯತೆಯಲ್ಲಿ ಕಾರ್ಯಪ್ರವೃತ್ತರಾಗಬೇಕು. ಮಳೆ ಪ್ರಾರಂಭವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯುವ ವರೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಹಣಕಾಸು ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಶಾಸಕ ಯಶ್‌ಪಾಲ್ ಸುವರ್ಣ ಸೂಚಿಸಿದರು.

ಶನಿವಾರ ಉಡುಪಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಪೂರೈಕೆ ಬಗ್ಗೆ ಉಡುಪಿ ವಿಧಾನಸಭಾ ಕ್ಷೇತ್ರದ ಪಿಡಿಒ ಮತ್ತು ಇಂಜಿನಿಯರುಗಳ ಸಭೆಯಲ್ಲಿ ಅವರು ಮಾತನಾಡಿದರು. ಪ್ರತಿ ಪಂಚಾಯಿತಿಯ ಪ್ರಸ್ತುತ ಪರಿಸ್ಥಿತಿ ಬಗ್ಗೆ ವಿವರವಾಗಿ ಮಾಹಿತಿ ಪಡೆದುಕೊಂಡರು.

ಮಳೆಗಾಲದ ಪೂರ್ವ ಸಿದ್ಧತೆಯಾಗಿ ಚರಂಡಿಗಳ ಹೂಳು ತೆಗೆಯುವುದು, ದಾರಿದೀಪ ನಿರ್ವಹಣೆ, ಅಪಾಯಕಾರಿ ಮರಗಳ ತೆರವು ಸಹಿತ ತುರ್ತು ಸಂದರ್ಭಗಳಿಗೆ ಪೂರಕ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಹೇಳಿದರು.

ಸಾರ್ವಜನಿಕರ ಸಮಸ್ಯೆ ಬೇಡಿಕೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ವಾರದಲ್ಲಿ 3 ದಿನ ನಿಗದಿತ ಸಮಯದಲ್ಲಿ ಅಹವಾಲು ಸ್ವೀಕಾರಕ್ಕೆ ಸಮಯ ಮೀಸಲಿಟ್ಟು ಪರಿಹಾರ ಒದಗಿಸಬೇಕು. ಈ ಬಗ್ಗೆ ಪಂಚಾಯಿತಿ ಫಲಕದಲ್ಲಿ ಮಾಹಿತಿ ನೀಡುವಂತೆ ಹೇಳಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಜಯಾ, ಬ್ರಹ್ಮಾವರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ವಿ. ಇಬ್ರಾಹಿಂಪುರ್, ಕುಡಿಯುವ ನೀರು ಮತ್ತು ನೈರ್ಮಲ್ಯ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ವೆಂಕಟೇಶ್ ಮೂರ್ತಿ, ನೀಲಾವರ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಂದ್ರ ನೀಲಾವರ, ಆರೂರು ಪಂಚಾಯಿತಿ ಅಧ್ಯಕ್ಷೆ ಮಮತಾ ಶೆಟ್ಟಿ, ಚೇರ್ಕಾಡಿ ಪಂಚಾಯಿತಿ ಅಧ್ಯಕ್ಷೆ ರೇಖಾ ಭಟ್, ವಾರಂಬಳ್ಳಿ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net