

ಮೈಸೂರು: ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಅವರ ಗೆಲುವಿಗೆ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ಪಕ್ಷದ ಮುಖಂಡರ ಸಭೆ ಭಾನುವಾರ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹಾಗೂ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಚುನಾವಣೆಯಲ್ಲಿ ಗೆಲುವು ಸಾಧಿಸಲು ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು ಪಕ್ಷದ ಮುಖಂಡರಿಗೆ ಮಾರ್ಗದರ್ಶನ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆ ಇದ್ದು, ಮತದಾರರು ಕಾಂಗ್ರೆಸ್ ಪರವಾಗಿ ಒಲವು ತೋರುತ್ತಿದ್ದಾರೆ. ಶಿಕ್ಷಕರ ಸಮಸ್ಯೆಗಳನ್ನು ಬಗೆ ಹರಿಸಲು ಕಾಂಗ್ರೆಸ್ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದೆ. ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡ ಶಿಕ್ಷಣ ಕ್ಷೇತ್ರ ಹಾಗೂ ಶಿಕ್ಷರ ಅಭಿವೃದ್ಧಿಗೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ಈ ವಿಚಾರವನ್ನು ಮತದಾರರಿಗೆ ತಲುಪಿಸುವ ಕಾರ್ಯ ಮಾಡಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಪಕ್ಷದ ಅಭ್ಯರ್ಥಿ ಮರಿತಿಬ್ಬೇಗೌಡ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಕೆ. ಹರೀಶ್ ಗೌಡ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಇತರರು ಇದ್ದರು.