ಮಾದಪ್ಪನ ಬೆಟ್ಟದಲ್ಲಿ ಕಾಮಗಾರಿ ಪೂರ್ಣಗೊಳಿಸಿ

25 HANUR 2
ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ರಘು, ಚಂದ್ರಶೇಖರ್, ಉಮೇಶ್ ಇತರರು ಇದ್ದರು.
Published on

ಹನೂರು: ಮಹದೇಶ್ವರ ಬೆಟ್ಟದಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ, ಭಕ್ತರಿಗೆ ಅನುಕೂಲ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಸೂಚಿಸಿದರು.

ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.

ಮ.ಬೆಟ್ಟಕ್ಕೆ ಆಗಮಿಸುವ ಭಕ್ತರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವುದು ನಮ್ಮ ಆದ್ಯ ಕರ್ತವ್ಯ. ಹಾಗಾಗಿ ಈ ಬಗ್ಗೆ ಅಧಿಕಾರಿಗಳು ಹೆಚ್ಚಿನ ಒತ್ತು ನೀಡಬೇಕು. ಈ ದಿಸೆಯಲ್ಲಿ ಪ್ರಾಧಿಕಾರದ ವತಿಯಿಂದ ಪ್ರಗತಿಯಲ್ಲಿರುವ 108 ಅಡಿ ಎತ್ತರದ ಶ್ರೀ ಮಹದೇಶ್ವರ ಮೂರ್ತಿಯ ಒಳಾಂಗಣದಲ್ಲಿ ಬಾಕಿ ಉಳಿದಿರುವ ಕೆಲಸವನ್ನು ಶೀಘ್ರ ಪೂರ್ಣಗೊಳಿಸಿ ಭಕ್ತರ ಸೇವೆಗೆ ಸಮರ್ಪಿಸಬೇಕು. ಹಾಗೆಯೇ 512 ವಸತಿ ಗೃಹದ ಕಟ್ಟಡ ಕಾಮಗಾರಿ ಪೂರ್ಣಗೊಳಿಸಬೇಕು. ಇನ್ನುಳಿದಂತೆ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಬೇಕು. ಈ ಬಗ್ಗೆ ಸಂಬಂಧಪಟ್ಟವರು ಅಗತ್ಯ ಮುತುರ್ವಜಿ ವಹಿಸಬೇಕು ಎಂದು ತಿಳಿಸಿದರು.

ಈ ಬಾರಿ ಸುಸೂತ್ರವಾಗಿ ನಡೆದ ಮಹಾ ಶಿವರಾತ್ರಿ ಜಾತ್ರೆಯ ಬಗ್ಗೆ ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿ, ಬೆಟ್ಟದಲ್ಲಿ ಇನ್ನು ಹೆಚ್ಚಿನ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು. ಪ್ಲಾಸ್ಟಿಕ್ ನಿಷೇಧವನ್ನು ಹಂತ ಹಂತವಾಗಿ ಕಾರ್ಯರೂಪಕ್ಕೆ ತರಬೇಕು. ಈ ದಿಸೆಯಲ್ಲಿ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಇದೇ ವೇಳೆ ಮ.ಬೆಟ್ಟ ಅಭಿವೃದ್ಧಿ ಸಂಬಂಧ ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಅವರಿಂದ ಸಲಹೆ, ಸೂಚನೆಯನ್ನು ಪಡೆಯಲಾಯಿತು. ಸಭೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು, ಉಪ ಕಾರ್ಯದರ್ಶಿ ಚಂದ್ರಶೇಖರ್, ತಾಪಂ ಇಒ ಉಮೇಶ್, ಪಿಡಬ್ಯುಡಿ ಎಇಇ ಚಿನ್ನಣ್ಣ ಇನ್ನಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net