ದೇವನಹಳ್ಳಿಯಲ್ಲಿ ಮೊಬೈಲ್ ಕ್ಲಿನಿಕ್

mobil
ದೇವನಹಳ್ಳಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮೊಬೈಲ್ ಕ್ಲಿನಿಕ್ ವಾಹನದ ಕಾರ್ಯವಿಧಾನಗಳನ್ನು ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಪರಿಶೀಲಿಸಿದರು. ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್‌ಕುಮಾರ್, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಅಧ್ಯಕ್ಷ ರಾಜಣ್ಣ, ಬಯ್ಯಪ್ಪ ಅಧ್ಯಕ್ಷ ಶಾಂತಕುಮಾರ್ ಮತ್ತಿತರರಿದ್ದರು.
Published on

*ಸಚಿವ ಕೆ.ಎಚ್.ಮುನಿಯಪ್ಪ ಹಸಿರು ನಿಶಾನೆ
*ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಭಾಗಿ

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಬಡವರು ಹಾಗೂ ಮಧ್ಯಮ ವರ್ಗದ ಜನರಿಗೆ ತುರ್ತಾಗಿ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸಲು ಪ್ರತಿಷ್ಠಿತ ಸಂಸ್ಥೆಯಾದ ವೋಲ್ವೋ ಹಾಗೂ ನಾರಾಯಣ ಹೃದಯಾಲಯ ಮುಂದಾಗಿರುವುದು ಸ್ವಾಗತಾರ್ಹ ವಿಷಯವಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.
ದೇವನಹಳ್ಳಿಯ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿದರು. ಕಾನ್ಸರ್, ಹೃದಯ ಸಂಬಂಧಿ ಸಮಸ್ಯೆಗಳು, ರೋಗನಿರ್ಣಯ ಸಮಸ್ಯೆಗಳಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ನೂತನ ಮೈಲಿಗಲ್ಲು ಸೃಷ್ಟಿಸಲಿದೆ ಎಂದರು. ಜಿಲ್ಲೆಯಲ್ಲಿ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸಿಕೊಡುವ ನಿಟ್ಟಿನಲ್ಲಿ ಸಂಸ್ಥೆಗಳು ಮುಂದೆ ಬಂದಿದ್ದು ಇನ್ನಿತರ ಸಂಸ್ಥೆಗಳಿಗೆ ಮಾದರಿ ಎನಿಸಿವೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಸ್ಥೆಗಳು ಇಂಥ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಮಹತ್ತರ ಹೆಜ್ಜೆ: ವೋಲ್ವೋ ಹಾಗೂ ನಾರಾಯಣ ಹೃದಯಾಲಯ ಸಹಯೋಗದಲ್ಲಿ ಇಂಥದೊಂದು ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ಗ್ರಾಮೀಣ ಪ್ರದೇಶದ ಜನರಿಗೂ ಗುಣಮಟ್ಟದ ವೈದ್ಯಕೀಯ ಸೌಲಭ್ಯ, ಚಿಕಿತ್ಸೆ ದೊರಕಿಸುವತ್ತ ಮಹತ್ತರ ಹೆಜ್ಜೆ ಇಟ್ಟಿದೆ. ಗ್ರಾಮೀಣ ಜನರಿಗೆ ಎಲ್ಲ ರೀತಿಯ ವೈದ್ಯಕೀಯ ಸೌಲಭ್ಯಗಳನ್ನು ಕಲ್ಲಿಸುವಲ್ಲಿ ಪ್ರಮುಖವಾದ ಪಾತ್ರ ವಹಿಸುತ್ತದೆ ಎಂದು ಸಚಿವರು ತಿಳಿಸಿದರು.

ವೆಲ್ ನೆಸ್ ಆನ್ ವ್ಹೀಲ್ಸ್ ಕಲ್ಪನೆ ವೆಲ್ ನೆಸ್ ಆನ್ ವ್ಹೀಲ್ಸ್ ಎಂಬ ಪರಿಕಲ್ಪನೆಯಲ್ಲಿ ಪ್ರಾರಂಭಗೊಂಡ ಸಂಚಾರ ಸಮುದಾಯ ಆರೋಗ್ಯ ಕೇಂದ್ರವು ಪ್ರಮುಖವಾಗಿ ಜನರನ್ನು ಕಾಡುತ್ತಿರುವ ಕಾನ್ಸರ್ ಕಾಯಿಲೆ, ಹೃದಯ ಸಂಬಂಧಿ ಸಮಸ್ಯೆಗಳು, ರೋಗನಿರ್ಣಯ ಸಮಸ್ಯೆಗಳಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸಲು ಮುಂದಡಿ ಇಟ್ಟಿದೆ. ಪ್ರಮುಖವಾಗಿ ಜಿಲ್ಲೆಯ ಗ್ರಾಮೀಣ ಜನರ ಆರೋಗ್ಯ ದೃಷ್ಟಿಯಿಂದ ಈ ಸಂಚಾರ ವಾಹನ ಪ್ರಮುಖ ಪಾತ್ರವಹಿಸಲಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ತಿಳಿಸಿದರು. ಗ್ರಾಮೀಣ ಪ್ರದೇಶದ ಜನರಿಗೂ ಗುಣಮಟ್ಟದ ವೈದ್ಯಕೀಯ ಸೌಲಭ್ಯ, ಚಿಕಿತ್ಸೆ ದೊರಕಿಸುವುದು ಇದರ ಉದ್ದೇಶವಾಗಿದೆ ಎಂದರು.

ಕಾರ್ಯವಿಧಾನ ಮಾಹಿತಿ ಹಂಚಿಕೆ ಸಂಚಾರ ವಾಹನಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ, ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಸುನೀಲ್ ಕುಮಾರ್ ಸಂಚಾರ ಸಮುದಾಯ ಆರೋಗ್ಯ ಕೇಂದ್ರ ವಾಹನದೊಳಗೆ ತೆರಳಿ ಕಾರ್ಯ ವಿಧಾನದ ಬಗ್ಗೆ ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net