

ಬೆಳಗಾವಿ: ಗ್ರಾಮೀಣ ಕ್ಷೇತ್ರವನ್ನು ರಾಜ್ಯದಲ್ಲೇ ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಮಾತನಾಡುವುದಕ್ಕಿಂತ ನನ್ನ ಅಭಿವೃದ್ಧಿ ಕಾರ್ಯಗಳೇ ಮಾತನಾಡುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಗ್ರಾಮೀಣ ಕ್ಷೇತ್ರದ ಸಾವಗಾಂವ -ಬೊಕನೂರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಅಭಿವೃದ್ಧಿ ಕಾಮಗಾರಿಗೆ ಭಾನುವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಜನರ ಸಮಸ್ಯೆಗಳಿಗೆ ಪ್ರಾಮಾಣಿಕವಾಗಿ ಸ್ಪಂದಿಸುವ ಮೂಲಕ ಜನದನಿಯಾಗಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದೇನೆ. ಯಾವುದೇ ಪಕ್ಷಪಾತವಿಲ್ಲದೆ ಕ್ಷೇತ್ರ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದೇನೆ ಎಂದರು.
ಕ್ಷೇತ್ರದ ಅಭಿವೃದ್ಧಿಯೇ ಮೂಲ ಧ್ಯೇಯವಾಗಿದ್ದು, ಪ್ರತಿ ಗ್ರಾಮದಲ್ಲಿ 2-3 ಮಂದಿರ ನಿರ್ಮಾಣ ಮಾಡಿದ್ದೇನೆ. ನಗರದಲ್ಲಿನ ಮೂಲ ಸೌಲಭ್ಯಗಳಿಗೆ ಸಮನಾಗಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ನಡೆಯುತ್ತಿದ್ದು, 2.50 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೊಂಡಿದ್ದು, ಗುಣಮಟ್ಟದ ರಸ್ತೆ ನಿರ್ಮಾಣವಾಗಲಿದೆ ಎಂದು ತಿಳಿಸಿದರು.
ಮುಖಂಡ ಮೃಣಾಲ್ ಹೆಬ್ಬಾಳ್ಕರ್, ನಾಗೇಂದ್ರ ನಾವಗೇಕರ್, ಮಲ್ಲಪ್ಪ ಪಾಟೀಲ, ಯಲ್ಲಪ್ಪ ಪಾಟೀಲ, ಕಾಶೀನಾಥ ಪಾಟೀಲ, ಮಾರುತಿ ಪಾಟೀಲ, ವಾಸು ಬಿಜಗರಣಿಕರ್,
ರಾಜು ಜಾಧವ್, ಶಾಂತು ಸಾವಗಾಂವ್ಕರ್, ಶಿವಾಜಿ ಪಾಟೀಲ, ಭರಮಾ ಕಾಂಬಳೆ ಇತರರಿದ್ದರು.