

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಾದ್ಯಂತ ಕಾಂಗ್ರೆಸ್ ಪರವಾಗಿ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈ ಕ್ಷೇತ್ರದಲ್ಲಿ ಮೋದಿ ಮ್ಯಾಜಿಕ್ ನಡೆಯುವುದಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಪ್ರಚಾರ ಸಮಿತಿ ಅಧ್ಯಕ್ಷ ಸೈಯದ್ ಹನೀಫ್ ತಿಳಿಸಿದರು.
ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆ ಹಾಗೂ ಭಾರತ್ ನ್ಯಾಯ ಯಾತ್ರೆ ದ್ವೇಷ, ಭಾವನಾತ್ಮಕ ವಿಚಾರಗಳಿಂದ ಒಡೆದು ಹೋದ ಜನರ ಬದುಕಿನಲ್ಲಿ ಪ್ರೀತಿಯ ಅಂಗಡಿ ತೆರೆದು ಪಂಚ ನ್ಯಾಯ ಗ್ಯಾರಂಟಿಗಳ ಮೂಲಕ ಜನರ ಆಶೋತ್ತರಗಳಿಗೆ ಪರಿಹಾರ ರೂಪಿಸಿದ್ದಾರೆ ಎಂದು ಹೇಳಿದರು.
22 ಶ್ರೀಮಂತ ಉದ್ಯಮಿಗಳ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿರುವ ಕೇಂದ್ರ ಸರ್ಕಾರ ದೇಶದ ಬೆನ್ನೆಲುಬಾಗಿರುವ ರೈತರ 2 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದೆ. ಕೇಂದ್ರ ಸರ್ಕಾರ ಶ್ರೀಮಂತ ಕಾರ್ಪೋರೇಟ್ ಪರ ಎಂಬುದನ್ನು ಸಾಬೀತುಪಡಿಸಿದೆ. ಇದನ್ನು ಅರ್ಥ ಮಾಡಿಕೊಂಡಿರುವ ಜನರು ಈ ಭಾರಿ ಕೋಮುವಾದಿ ಹಾಗೂ ಸಂವಿಧಾನ ವಿರೋಧಿ ಪಕ್ಷಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುತ್ತಿದ್ದರೂ ಕೇವಲ ನಾಯಕರ ಮಟ್ಟದಲ್ಲಿ ಮಾತ್ರ ಮೈತ್ರಿಯಾಗಿದೆ. ಸಾಮಾನ್ಯ ಜನರು ಕಾಂಗ್ರೆಸ್ ಪರವಾಗಿದ್ದಾರೆ. ದೇಶದಲ್ಲಿ ಹೇಗಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂದು ಕೊಂಡಿರುವ ಬಿಜೆಪಿ 7 ಹಂತಗಳಲ್ಲಿ 3 ತಿಂಗಳು ಚುನಾವಣೆ ನಡೆಸುತ್ತಿರುವುದನ್ನು ಗಮನಿಸಿದರೆ ಅನ್ಯ ಮಾರ್ಗದಲ್ಲಿ ಅಧಿಕಾರ ಹಿಡಿಯುವ ಹುನ್ನಾರ ನಡೆಸಿದೆ ಎಂಬುದು ತಿಳಿಯುತ್ತದೆ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ತನೋಜ್ ನಾಯ್ಡು, ಗಂಗಾದರ್, ನಾಸೀರ್ ಹುಸೇನ್ ಉಪಸ್ಥಿತರಿದ್ದರು.