

ಬೆಂಗಳೂರು: ನೆರೆಯ ರಾಷ್ಟ್ರ ಪಾಕಿಸ್ತಾನ ಸೇರಿ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಮಂಕಿಪಾಕ್ಸ್ ಶಂಕಿತರನ್ನು ಪತ್ತೆ ಹೆಚ್ಚಿ ನಿಗಾ ಇಡಬೇಕು ಎಂದು ಆರೋಗ್ಯ ಇಲಾಖೆ ಸೂಚಿಸಿದೆ.
ದೇಶದಲ್ಲಿ ಈವರೆಗೆ ಯಾವುದೇ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿಲ್ಲ. ಆಫ್ರಿಕನ್ ರಾಷ್ಟ್ರಗಳಲ್ಲಿ 2023ರ ಜನವರಿಯಿಂದ ಈವರೆಗೆ 16,600 ಶಂಕಿತ ಮಂಕಿಪಾಕ್ಸ್ ಪ್ರಕರಣಗಳು ಪತ್ತೆಯಾಗಿದ್ದು, 2,863 ಮಂದಿಗೆ ಈ ರೋಗ ದೃಢಪಟ್ಟಿದೆ. 537 ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆ ಮೇರೆಗೆ ಪ್ರಕರಣಗಳು ವರದಿಯಾದ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸುವ ಅಗತ್ಯವಿದೆ ಎಂದು ತಿಳಿಸಲಾಗಿದೆ.
ಈ ರೋಗ ಶಂಕಿತ ಪ್ರಕರಣಗಳ ನಿರ್ವಹಣೆಗೆ ಬೆಂಗಳೂರಿನ ಇಂದಿರಾನಗರದಲ್ಲಿರುವ ಸಾಂಕ್ರಾಮಿಕ ರೋಗಗಳ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯನ್ನು ಗುರುತಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲೂ 50 ಹಾಸಿಗೆಗಳನ್ನು ಮೀಸಲಿಡಲಾಗಿದೆ. ಶಂಕಿತರನ್ನು ಈ ಆಸ್ಪತ್ರೆಗಳಲ್ಲಿ ದಾಖಲಿಸಿ, ನಿಗಾ ವ್ಯವಸ್ಥೆಗೆ ಒಳಪಡಿಸುವಂತೆ ಸೂಚಿಸಲಾಗಿದೆ. ಶಂಕಿತರ ಮಾದರಿಗಳನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಬೇಕು. ಪರೀಕ್ಷೆಯ ವರದಿಯಲ್ಲಿ ರೋಗ ದೃಢಪಟ್ಟರೆ 21 ದಿನಗಳವರೆಗೆ ಅಥವಾ ಗುಳ್ಳೆಗಳು ಸಂಪೂರ್ಣ ನಿವಾರಣೆಯಾಗುವವರೆಗೆ ಪ್ರತ್ಯೇಕವಾಗಿ ಇರಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.