

ಚಿಕ್ಕಬಳ್ಳಾಪುರ: ಪ್ರಸ್ತುತ ದೇಶದ ವಿವಿಧ ಭಾಗಗಳಲ್ಲಿ ಮಂಕಿಪಾಕ್ಸ್ ರೋಗದ ಪ್ರಕರಣಗಳು ವರದಿಯಾಗಿವೆ. ಆದರೂ ಜಿಲ್ಲೆಯ ಜನರು ಆತಂಕಪಡುವ ಅವಶ್ಯಕತೆ ಇಲ್ಲ. ಮುಂಜಾಗ್ರತಾ ಕ್ರಮಗಳ ಪಾಲನೆಯಿಂದ ಎಚ್ಚರದಿಂದ ಇರಬೇಕು ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಸಲಹೆ ನೀಡಿದರು.
ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೋಂಕು ನಿಯಂತ್ರಣದಲ್ಲಿದೆ ಎಂದು ಅಸಡ್ಡೆ ಭಾವನೆಯಲ್ಲಿ ಕರೊನಾ ಬಗ್ಗೆ ನಿರ್ಲಕ್ಷ್ಯ ತೋರಬಾರದು. ಮುಂಜಾಗ್ರತಾ ಕ್ರಮವಾಗಿ ಪ್ರತಿಯೊಬ್ಬರೂ ಸ್ವಯಂ ಪ್ರೇರಿತರಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗಳಿಗೆ ತೆರಳಿ, ಲಸಿಕೆ ಹಾಕಿಸಿಕೊಳ್ಳಬೇಕು ಎಂದರು.
ಗ್ರಾಮೀಣ ಭಾಗದಲ್ಲಿ ಹೆಚ್ಚಿಗೆ ಗರ್ಭಿಣಿಯರು ರಕ್ತದೊತ್ತಡ ಮತ್ತು ಪೌಷ್ಟಿಕಾಂಶದ ಕೊರತೆಯಿಂದ ಬಳಲುತ್ತಿರುವುದು ತಿಳಿದು ಬಂದಿದೆ. ಇದನ್ನು ನಿರ್ಲಕ್ಷಿಸಿದಾಗ ತಾಯಿ ಮತ್ತು ಮಗುವಿನ ಮರಣ ಪ್ರಮಾಣ ಏರಿಕೆ ಸಾಧ್ಯತೆ ಇರುತ್ತದೆ. ಇದಕ್ಕೆ ಅವಕಾಶ ನೀಡದಿರಲು ಆಶಾ ಕಾರ್ಯಕರ್ತೆಯರು ಸಮಸ್ಯಾತ್ಮಕ ಮಹಿಳೆಯರನ್ನು ಗುರುತಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಗರ್ಭಧಾರಣೆ, ತಾಯಿ ಮತ್ತು ಮಗುವಿನ ಆರೈಕೆ ಬಗ್ಗೆ ಅರಿವು ಮೂಡಿಸಬೇಕು. ಇದಕ್ಕೆ ಅನುಗುಣವಾಗಿ ಯಾವುದೇ ಅನಾಹುತಗಳಿಗೆ ಅವಕಾಶ ನೀಡದಂತೆ ವೈದ್ಯರು ಎಚ್ಚರವಹಿಸಬೇಕು ಎಂದರು.ಇದೇ ವೇಳೆ ಕುಷ್ಠರೋಗದ ಕುರಿತು ಅರಿವು ಮೂಡಿಸುವ ಕರಪತ್ರ ಮತ್ತು ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಯೆಲ್ಲಾ ರಮೇಶ್ ಬಾಬು, ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಭಾನು, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ರಮೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಮಂಜುಳಾ ಮತ್ತಿತರರು ಇದ್ದರು.
ಆ.18ರಿಂದ ಆಂದೋಲನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಆ.18ರಿಂದ ಸೆ.3 ರವರೆಗೆ ಕುಷ್ಠ ರೋಗ ಪತ್ತೆ ಹಚ್ಚುವ ಅಭಿಯಾನ ಕೈಗೊಳ್ಳಲಾಗಿದೆ. ದೇಹದಲ್ಲಿ ಯಾವುದೇ ರೀತಿಯ ಸ್ಪರ್ಶ ಜ್ಞಾನವಿಲ್ಲದ ತಿಳಿ ಬಿಳಿ ಇಲ್ಲವೇ ತಾಮ್ರ ಬಣ್ಣದ ಮಚ್ಚೆಗಳು ಕಂಡು ಬಂದಲ್ಲಿ ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಗಳಿಗೆ ಭೇಟಿ ನೀಡಿ, ಪರೀಕ್ಷಿಸಿಕೊಳ್ಳಬೇಕು. ಒಂದು ವೇಳೆ ರೋಗ ಪತ್ತೆಯಾದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಇದಕ್ಕೆ ಈಗಾಗಲೇ ಉಚಿತ ಸೇವೆ ಒದಗಿಸುತ್ತಿದೆ ಎಂದು ಡಿಸಿ ತಿಳಿಸಿದರು.