

ಬೆಂಗಳೂರು: ಕರಾವಳಿ, ಮಲೆನಾಡು ಮತ್ತು ದಕ್ಷಿಣ ಕರ್ನಾಟಕ ಸೇರಿ ರಾಜ್ಯದ ವಿವಿಧ ಭಾಗಗಳಲ್ಲಿ ಮುಂಗಾರು ಸಕ್ರಿಯವಾಗಿದೆ. ಇದರ ಪರಿಣಾಮ ಮುಂದಿನ 4 ದಿನ ಆ ಭಾಗಗಳಲ್ಲಿ ಇನ್ನಷ್ಟು ಬಿರುಸಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಕಳೆದ 24 ಗಂಟೆ ಅವಧಿಯಲ್ಲಿ ತುಮಕೂರಿನ ಮಧುಗಿರಿ 11, ಸಿರಾ 8, ಬರಗೂರು 7, ಚಿತ್ರದುರ್ಗ, 7, ಮಂಡ್ಯದ ನಾಗಮಂಗಲ 7 ಸೆಂಮೀ ಮಳೆಯಾಗಿತ್ತು. ಬೆಂಗಳೂರು ನಗರ, ಬೆಂ. ಗ್ರಾಮಾಂತರ, ಮೈಸೂರು, ಉಡುಪಿ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬೀದರ್‌ನಲ್ಲಿಯೂ ತುಸು ಜೋರಾಗಿತ್ತು. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 3 ದಿನ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬೆಳಗಾವಿ, ಧಾರವಾಡ, ಹಾವೇರಿ, ದಾವಣಗೆರೆ, ವಿಜಯನಗರದಲ್ಲಿ ಮುಂದಿನ 2 ದಿನ ಜೋರಾಗಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಕೊಡಲಾಗಿದೆ.
ಬಾಗಲಕೋಟೆ, ಗದಗ, ಕೊಪ್ಪಳದಲ್ಲಿ ಆ.6ರಂದು ಭಾರಿ ಮಳೆಯಾಗುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಕೊಟ್ಟರೆ, ಮೈಸೂರು, ರಾಮನಗರ, ಚಾಮರಾಜನಗರದಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅಲರ್ಟ್ ಇರಲಿದೆ. ಬೆಂಗಳೂರು ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು,ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಂಭವ ಇದೆ. ಗಂಟೆಗೆ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 20 ಡಿ.ಸೆ. ಇರಲಿದೆ.