

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಮುಂಗಾರು (ನೈಋತ್ಯ ಮಾನ್ಸೂನ್) ಮಂಗಳವಾರ ಕೊನೆಗೊಳ್ಳಲಿದೆ. ಈ ಬಾರಿ ವಾಡಿಕೆಗಿಂತ ಮುಂಚಿತವಾಗಿ ಆಗಮಿಸಿದ್ದ ಮಾನ್ಸೂನ್ ಆಶಾದಾಯಕವಾಗಿತ್ತು. 4 ತಿಂಗಳ ಅವಧಿಯಲ್ಲಿ ರಾಜ್ಯಾದಂತ ವಾಡಿಕೆಯಂತೆ ವರ್ಷಧಾರೆಯಾಗಿದೆ. ಮಲೆನಾಡು, ಕರಾವಳಿ, ದಕ್ಷಿಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ವಾಡಿಕೆಯಷ್ಟೇ ಸುರಿದಿದೆ. ಆದರೆ, ಉತ್ತರ ಕರ್ನಾಟಕದ ಭಾಗದಲ್ಲಿ ವಾಡಿಕೆಗಿಂತ ತುಸು ಅಧಿಕವಾಗಿ ಬಿದ್ದಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನೀಡಿರುವ ಅಂಕಿಅಂಶಗಳಿಂದ ತಿಳಿದುಬಂದಿದೆ.
3 ದಿನ ಸಾಧಾರಣ ಮಳೆ:
ರಾಜ್ಯದ ಹಲವೆಡೆ ಮುಂದಿನ 3 ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಬೆಂ.ಗ್ರಾಮಾಂತರ, ಬೆಂ.ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮುಂದಿನ 3 ದಿನ ಭಾಗಶಃ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗಲಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 60 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳದಂತೆ ಮೀನುಗಾರರಿಕೆ ಇಲಾಖೆ ಸೂಚಿಸಿದೆ. ಬೆಂಗಳೂರು ನಗರ ಮತ್ತು ಅದರ ಸುತ್ತಮುತ್ತ ಪ್ರದೇಶಗಳಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29 ಮತ್ತು 20 ಡಿ.ಸೆ.ದಾಖಲಾಗಲಿದೆ.
ರಾಜ್ಯದಲ್ಲಿ ಅ.15ರಿಂದ ಈಶಾನ್ಯ ಮಾನ್ಸೂನ್ ಆರಂಭವಾಗಲಿದ್ದು, ಇದರಿಂದ ದಕ್ಷಿಣ ಕರ್ನಾಟಕದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಜೋರು ಮಳೆ ಸುರಿಯುವ ಸಂಭವ ಇದೆ. ಉತ್ತರ ಕರ್ನಾಟಕದಲ್ಲಿ ಸುರಿಯುತ್ತಿರುವ ಮಳೆ ಈಗಾಗಲೇ ತಗ್ಗಿದೆ.
| ಸಿ.ಎಸ್.ಪಾಟೀಲ್, ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ.