

ವಿಜಯವಾಣಿ ಸುದ್ದಿಜಾಲ ಹುಬ್ಬಳ್ಳಿ: ಮುಂಬರುವ ದಿನಗಳಲ್ಲಿ ರಾಜ್ಯದ ಜನರಿಗೆ 37 ಸಾವಿರಕ್ಕೂ ಅಧಿಕ ಮನೆಗಳನ್ನು ಹಂಚಿಕೆ ಮಾಡಲಾಗುವುದು. ಅದಕ್ಕೂ ಪೂರ್ವದಲ್ಲಿ ಅರ್ಧಕ್ಕೆ ನಿಂತಿರುವ ಮನೆಗಳ ನಿರ್ಮಾಣ ಕೆಲಸ ಪೂರ್ಣಗೊಳಿಸುವ ಉದ್ದೇಶವನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ ಖಾನ್ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಈ ಹಿಂದೆ ಸಿಎಂ ಆಗಿದ್ದ ಸಂದರ್ಭದಲ್ಲಿ ಮನೆಗಳ ಹಂಚಿಕೆಗೆ ಅನುಮತಿ ಕೊಟ್ಟಿದ್ದರು. ಆ ಬಳಿಕ ಬಿಜೆಪಿ ಸರ್ಕಾರ ಒಂದೇ ಒಂದು ಮನೆಯನ್ನು ಜನರಿಗೆ ಕೊಡಲಿಲ್ಲ. ಅಷ್ಟೇ ಅಲ್ಲದೇ ಕೇಂದ್ರ ಸರ್ಕಾರ ವಸತಿ ಯೋಜನೆಯಡಿ ನೀಡುವ ಹಣವನ್ನು ವಾಪಸ್ ಜನರಿಂದಲೇ ಜಿಎಸ್ಟಿ ರೂಪದಲ್ಲಿ ವಸೂಲಿ ಮಾಡುತ್ತಿದೆ ಎಂದು ಆರೋಪಿಸಿದರು.
ಕಳೆದ ಫೆಬ್ರುವರಿಯಿಂದ ರಾಜ್ಯ ಸರ್ಕಾರ ಬಡವರಿಗೆ 36,700 ಮನೆಗಳನ್ನು ಹಂಚಿಕೆ ಮಾಡಿದೆ. ರಾಜ್ಯದಲ್ಲಿ ವಸತಿ ರಹಿತರ ಸಮೀಕ್ಷೆ ಕೂಡ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಸರ್ವರಿಗೂ ಸೂರು ಒದಗಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ ಎಂದು ಹೇಳಿದರು.