

ಬೆಂಗಳೂರು: ರಾಜ್ಯಾದ್ಯಂತ ಜು.1ರಿಂದ ಜು.6ರವರೆಗೆ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಆರು ದಿನದಲ್ಲಿ ವಾಡಿಕೆಯಂತೆ 55 ಮಿಮೀ ಮಳೆಯಾಗಬೇಕಿತ್ತು. ಆದರೆ, 63 ಮಿಮೀ ಸುರಿದಿದ್ದು, ಶೇ.27 ವಾಡಿಕೆಗಿಂತ ಹೆಚ್ಚು ಬಿದ್ದಿರುವುದು ಗಮನಾರ್ಹ.
ಕರಾವಳಿಯಲ್ಲಿ ಶೇ.43, ದಕ್ಷಿಣ ಕರ್ನಾಟಕದಲ್ಲಿ ಶೇ.26, ಉತ್ತರ ಕರ್ನಾಟಕದಲ್ಲಿ ಶೇ.24, ಮಲೆನಾಡಲ್ಲಿ ಶೇ.7ರಷ್ಟು ವಾಡಿಕೆಗಿಂತ ಅಧಿಕ ವರ್ಷಧಾರೆಯಾಗಿದೆ. ಜು.1ರಿಂದ ಮಾನ್ಸೂನ್ ಚುರುಕಾದ ಕಾರಣ 20 ಜಿಲ್ಲೆಗಳಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಪ್ರಮಾಣದಲ್ಲಿ ವರ್ಷಧಾರೆಯಾದರೆ, 11 ಜಿಲ್ಲೆಗಳಲ್ಲಿ ವಾಡಿಕೆಯಷ್ಟು ಬಿದ್ದಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ, ಚಿಕ್ಕಮಗಳೂರು, ಕೊಡಗಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ನದಿಗಳು, ಜಲಾಶಯಗಳಿಗೆ ಗಣನೀಯ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.
ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಶನಿವಾರವೂ ವರುರ್ಣಾಭಟ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ ಕೊಡಗಿನ ಗೋಣಿಕೊಪ್ಪದಲ್ಲಿ ಬರೋಬ್ಬರಿ 27 ಸೆಂಮೀ ಮಳೆ ಸುರಿದಿದೆ. ಚಿಕ್ಕಮಗಳೂರಿನ ಮೂಡಗೆರೆ, ದಾವಣಗೆರೆ, ಶಿವಮೊಗ್ಗ, ಮಂಡ್ಯ, ದಣ ಕನ್ನಡದ ಮಂಗಳೂರಿನಲ್ಲಿ ಭರ್ಜರಿ ವರ್ಷಧಾರೆಯಾಗಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 4 ದಿನ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಬೀಳುವ ಸಂಭವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಹಾಗೂ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ