

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಆರಂಭ ಉತ್ತಮವಾಗಿದೆ. ಜೂ 1ರಿಂದ ಜೂ 15ರವರೆಗೆ 23 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ.
4 ಜಿಲ್ಲೆಗಳಲ್ಲಿ ವಾಡಿಕೆಯಷ್ಟೇ ಮಳೆಯಾದರೆ, 4 ಜಿಲ್ಲೆಗಳಲ್ಲಿ ಕುಂಠಿತವಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು, ಬೆಂ.ಗ್ರಾಮಾಂತರ, ಮಂಡ್ಯ, ಚಾಮರಾಜನಗರ, ದಾವಣಗೆರೆ, ಮೈಸೂರು, ರಾಮನಗರದಲ್ಲಿ ವಾಡಿಕೆಗಿಂತ ಅಧಿಕವಾಗಿ ಮಳೆಯಾಗಿದೆ.
ಉತ್ತರ ಕನ್ನಡ, ಹಾವೇರಿ, ಉಡುಪಿ, ಹಾಸನದಲ್ಲಿ ವಾಡಿಕೆಯಷ್ಟೇ ವರ್ಷಧಾರೆಯಾದರೆ, ಶಿವಮೊಗ್ಗ, ಕೊಡಗು, ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಬಿದ್ದಿದೆ. 169 ತಾಲೂಕುಗಳಲ್ಲಿ ವಾಡಿಕೆಗಿಂತ ಹೆಚ್ಚು ವರ್ಷಧಾರೆಯಾದರೆ, 39 ತಾಲೂಕುಗಳಲ್ಲಿ ವಾಡಿಕೆಯಷ್ಟೇ ಬಿದ್ದಿದೆ. 28 ತಾಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಸುರಿದಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.
ಕರಾವಳಿಯಲ್ಲಿ ಚುರುಕು:
ಮಾರುತಗಳು ದುರ್ಬಲವಾದ ಪರಿಣಾಮ ಕ್ಷೀಣವಾಗಿದ್ದ ಮಳೆ ಕರಾವಳಿಯಲ್ಲಿ ತುಸು ಚುರುಕಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂ 18ರಂದು ಭಾರಿ ಮಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್ ಕೊಟ್ಟಿದೆ. ಈ ಜಿಲ್ಲೆಗಳಲ್ಲಿ ಜೂ 19ರಿಂದ ಜೂ 20ರವರೆಗೆ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾದರೆ, ಜೂ 21ರಿಂದ ಮುಂದಿನ ಎರಡು ದಿನ ಯೆಲ್ಲೋ ಅರ್ಲಟ್ ಇರಲಿದೆ. ಮಲೆನಾಡು, ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.