

ಚಿಕ್ಕಮಗಳೂರು: ಪರಿಶಿಷ್ಟ ಸಮುದಾಯದ ಬಾಲಕಿಯರ ವಿದ್ಯಾರ್ಥಿನಿ ನಿಲಯದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಸೋಮವಾರ ರಾತ್ರಿ ದಿಢೀರ್ ಅಸ್ವಸ್ಥಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ನಡೆದಿದೆ. ನಗರದ ಜಯನಗರ ಬಡಾವಣೆಯಲ್ಲಿರುವ ಪರಿಶಿಷ್ಟ ಪಂಗಡದ ಬಾಲಕಿಯರ ವಿದ್ಯಾರ್ಥಿ ನಿಲಯದ 10 ಮಂದಿ ವಿದ್ಯಾರ್ಥಿನಿಯರು ಹೊಟ್ಟೆ ನೋವು ಹಾಗೂ ತಲೆ ಸುತ್ತುವಿಕೆಯಿಂದ ಅಸ್ವಸ್ಥರಾಗಿದ್ದರು. ಕೂಡಲೇ ಹಾಸ್ಟೆಲ್ ಸಿಬ್ಬಂದಿ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ಸಮಾಜ ಕಲ್ಯಾಣ ಇಲಾಖೆಯ ಹಿರಿ ಅಧಿಕಾರಿಗಳು ವಿದ್ಯಾರ್ಥಿಗಳ ಯೋಗಕ್ಷೇಮ ವಿಚಾರಿಸಿದರು ಜೊತೆಗೆ ಆಸ್ಪತ್ರೆ ವೈದ್ಯರಿಂದ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದರು.
ಬೆಳಗ್ಗೆ ವೇಳೆ ಆಗಲೇ ಎಲ್ಲಾ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಹಾರ ಸೇವನೆಯಲ್ಲಿ ವ್ಯತ್ಯಾಸವಾಗಿದ್ದರಿಂದ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದಾರೆಯೇ ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಆದರೆ ಪ್ರಾಥಮಿಕ ಮಾಹಿತಿಗಳ ಪ್ರಕಾರ ಆಹಾರ ಸೇವನೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಆದರೆ ಪರೀಕ್ಷಾಭಯದಿಂದ ವಿದ್ಯಾರ್ಥಿಗಳು ಅಸ್ವಸ್ಥರಾಗಿರಬಹುದು ಎನ್ನಲಾಗುತ್ತಿದೆ.
ಆರಂಭದಲ್ಲಿ ಹಾಸ್ಟೆಲ್ನ ಓರ್ವ ವಿದ್ಯಾರ್ಥಿನಿ ಅಸ್ವಸ್ಥಗೊಂಡಿದ್ದಳು ಇದನ್ನು ನೋಡಿದ ಇತರ ವಿದ್ಯಾರ್ಥಿನಿಯರು ಹೆದರಿಕೆಯಿಂದ ಅವರೂ ಅಸ್ವಸ್ಥರಾಗಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತು ವಿಜಯವಾಣಿಗೆ ಮಾಹಿತಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಯೋಗೀಶ್, ಸೋಮವಾರ ರಾತ್ರಿ ವೇಳೆ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು ಅವರಿಗೆ ಸೂಕ್ತ ಚಿಕಿತ್ಸೆ ನೀಡಿದ ಬಳಿಕ ಎಲ್ಲರೂ ಚೇತರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ನಿನ್ನೆ ಮಧ್ಯಾಹ್ನ ಹಾಗೂ ರಾತ್ರಿ ಸೇವಿಸಿದ ಆಹಾರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಯಾವ ಕಾರಣಕ್ಕೆ ಅಸ್ವಸ್ಥರಾದರು ಎನ್ನುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಹೇಳಿದರು.