ಜು.12ರಂದು ಜಿಲ್ಲಾ ಕಾಂಗ್ರೆಸ್‌ನಿಂದ ಮೌನ ಸತ್ಯಾಗ್ರಹ

h.s.Sundresh
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್
Published on

ಶಿವಮೊಗ್ಗ: ಎಐಸಿಸಿ ನಾಯಕ ರಾಹುಲ್ ಗಾಂಧಿ ಸಂಸದ ಸ್ಥಾನವನ್ನು ಅನರ್ಹಗೊಳಿಸಿದ್ದನ್ನು ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್‌ನಿಂದ ಜು.12ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಮಹಾತ್ಮಗಾಂಧಿ ಪಾರ್ಕ್‌ನಲ್ಲಿ ಮೌನ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್ ತಿಳಿಸಿದರು.

ಸಂಸದ ಸ್ಥಾನವನ್ನು ಅನರ್ಹಗೊಳಿಸಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಿ ರಾಹುಲ್ ಗಾಂಧಿ ಧ್ವನಿ ಹತ್ತಿಕ್ಕುವ ಹುನ್ನಾರ ನಡೆಸಲಾಗಿದೆ. ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು, ವಿಧಾನಸಭೆ ಚುನಾವಣೆಯಲ್ಲಿ ಬುದ್ಧಿ ಕಲಿಸಿದಂತೆ ಲೋಕಸಭೆ ಚುನಾವಣೆಯಲ್ಲೂ ಪಾಠ ಕಲಿಸಲು ಜನರು ಕಾಂಗ್ರೆಸ್ ಜತೆಗೆ ನಿಲ್ಲಲಿದ್ದಾರೆ. ರಾಹುಲ್ ಗಾಂಧಿ ಜನಬೆಂಬಲ ಸಹಿಸದೇ ಹತಾಶೆಗೆ ಒಳಗಾಗಿರುವ ಬಿಜೆಪಿ ನಾಯಕರಿಗೆ ಜನರು ತಕ್ಕಪಾಠ ಕಲಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದರು.
ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗಿಂತ ರಾಹುಲ್ ಗಾಂಧಿ ಅವರ ಖ್ಯಾತಿ ಶೇ.26 ಹೆಚ್ಚಾಗಿದೆ. ಸಮಾನತೆ ಕಾಯ್ದುಕೊಳ್ಳಬೇಕಾದ ಕೇಂದ್ರ ಸರ್ಕಾರ ದೇಶದಲ್ಲಿ ಅಶಾಂತಿ ಉಂಟು ಮಾಡುತ್ತಿದೆ. ವಿಪಕ್ಷಗಳ ಧ್ವನಿ ಹತ್ತಿಕ್ಕಲು ಇಡಿ, ಸಿಬಿಐ ಮೂಲಕ ತೊಂದರೆ ಕೊಡುತ್ತಿದೆ ಎಂದು ದೂರಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಮೌನ ಸತ್ಯಾಗ್ರಹವನ್ನು ಹಮ್ಮಿಕೊಳ್ಳಲಾಗಿದೆ. ಶಾಸಕರಾದ ಬೇಳೂರು ಗೋಪಾಲಕೃಷ್ಣ, ಬಿ.ಕೆ.ಸಂಗಮೇಶ್ವರ್, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸೇರಿದಂತೆ ಜಿಲ್ಲೆ, ತಾಲೂಕು ಮತ್ತು ಹೋಬಳಿಮಟ್ಟದ ನಾಯಕರು ಹಾಗೂ ಕಾರ್ಯಕರ್ತರು ಸತ್ಯಾಗ್ರಹದಲ್ಲಿ ಪಾಲ್ಗೊಳ್ಳುವರು ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಸ್.ಚಂದ್ರಭೂಪಾಲ್, ಮಹಾನಗರ ಪಾಲಿಕೆ ಪ್ರತಿಪಕ್ಷ ನಾಯಕಿ ರೇಖಾ ರಂಗನಾಥ, ಸದಸ್ಯರಾದ ಯಮುನಾ ರಂಗೇಗೌಡ, ಮೆಹಖ್ ಷರೀಫ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net