ಮತದಾನದಿಂದ ಪ್ರಜಾಪ್ರಭುತ್ವದ ಬುನಾದಿ ಸದೃಢ: ಜಿಪಂ ಸಿಇಓ

udp-16-zp ceo
Published on

ಉಡುಪಿ: ಪ್ರಜಾಪ್ರಭುತ್ವದ ಬುನಾದಿಯನ್ನು ಸದೃಢಗೊಳಿಸಲು ಪ್ರತಿಯೊಬ್ಬ ಅರ್ಹ ಮತದಾರರು ಮತದಾನ ಕೇಂದ್ರಗಳಿಗೆ ತೆರಳಿ ಏ. 26 ಹಾಗೂ ಮೇ 7 ರಂದು ಮತದಾನ ಮಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್​ ಸಮಿತಿ ಅಧ್ಯಕ್ಷ ಪ್ರತಿಕ್​ ಬಾಯಲ್​ ಹೇಳಿದರು.

ಮಂಗಳವಾರ ಮಣಿಪಾಲ ರಜತಾದ್ರಿಯ ಜಿಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ಸ್ವೀಪ್​ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳೇ ಪ್ರಭುಗಳು. ಮತದಾನದ ಮೂಲಕ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಮತದಾರರು ಯಾವುದೇ ಆಸೆ-ಆಮೀಷಗಳಿಗೆ ಒಳಗಾಗದೇ ನಿರ್ಭೀತಿಯಿಂದ ಉತ್ತಮ ಅಭ್ಯರ್ಥಿಗಳನ್ನು ಮತದಾನ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಬಹುದಾಗಿದೆ ಎಂದರು.

ಇತ್ತೀಚಿನ ಚುನಾವಣೆಗಳಲ್ಲಿ ಗ್ರಾಮೀಣ ಪ್ರದೇಶಕ್ಕಿಂತ ನಗರದ ಪ್ರದೇಶದಲ್ಲಿ ವಾಸಿಸುತ್ತಿರುವವರ ಮತದಾನ ಮಾಡುವ ಪ್ರಮಾಣ ಕಡಿಮೆ ಇದೆ. ಜಿಲ್ಲೆಯಲ್ಲಿ ಕಳೆದ ಬಾರಿ ಕಡಿಮೆ ಮತದಾನ ಆಗಿರುವ ಸ್ಥಳಗಳನ್ನು ಸಮೀಕ್ಷೆ ಮಾಡಿ, ಕಡಿಮೆ ಮತದಾನಕ್ಕೆ ಕಾರಣ ಗುರುತಿಸಿ ಮತದಾನ ಪ್ರಮಾಣ ಹೆಚ್ಚಿಸಲು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಉಡುಪಿ ನಗರದಲ್ಲಿ ಚುನಾವಣೆಗೂ ಮೂರು-ನಾಲ್ಕು ದಿನಗಳ ಮುಂಚೆ ಜನಸಾಮಾನ್ಯರಲ್ಲಿ ಮತದಾನದ ಕುರಿತು ಜಾಗೃತಿ ಮೂಡಿಸುವ ಬೃಹತ್​ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲು ಸೂಚನೆ ನೀಡಿದರು.

ಹಿರಿಯ ನಾಗರಿಕರಿಗೆ, ವಿಕಲಚೇತನರಿಗೆ ಹಾಗೂ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ರ್ಯಾಂಪ್​ ವ್ಯವಸ್ಥೆ, ನೆರಳಿನ ವ್ಯವಸ್ಥೆ, ಸೇರಿದಂತೆ ಮತ್ತಿತರ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದರು.
ಇದೇ ಸಂದರ್ಭದಲ್ಲಿ ಮತದಾನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಪೋಸ್ಟರ್​ಗಳು ಹಾಗೂ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್​, ಜಿ.ಪಂ. ಉಪ ಕಾರ್ಯದರ್ಶಿ ರಾಧಾಕೃಷ್ಣ ಅಡಿಗ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net