ಸಂಸದರ ಮನೆಗೆ ಮುತ್ತಿಗೆ ಯತ್ನ: ಕಾಂಗ್ರೆಸ್ ಕಾರ್ಯಕರ್ತರ ಬಂಧನ, ಬಿಡುಗಡೆ

5 smg 5
Published on

ಶಿವಮೊಗ್ಗ: ಪೆಟ್ರೋಲ್, ಡೀಸೆಲ್, ಗ್ಯಾಸ್ ಸಿಲಿಂಡರ್ ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಗುರುವಾರ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರ ವಿನೋಬನಗರದ ಮನೆ ಮುತ್ತಿಗೆ ಹಾಕಲು ಯತ್ನಿಸಿದ್ದು 75ಕ್ಕೂ ಅಧಿಕ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಬಿಡುಗಡೆಗೊಳಿಸಿದರು.

ಕೇಂದ್ರ ಸರ್ಕಾರ ರೈತರು, ಕಾರ್ಮಿಕರು, ಶ್ರೀಸಾಮಾನ್ಯ ವಿರೋಧಿ ನೀತಿ ಅನುಸರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆ, ನೆರೆ ಪರಿಹಾರ, ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ, ಕರೊನಾ ನಿರ್ವಹಣೆ ಮತ್ತು ಲಸಿಕೆ ವಿತರಣೆಯಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಮುತ್ತಿಗೆ ಹಾಕಲು ಮುಂದಾದ ಕಾರ್ಯಕರ್ತರನ್ನು ಪೊಲೀಸರು ತಡೆದರು.

ಬಿಜೆಪಿಯ ಎಲ್ಲ ಸಂಸದರು ಸಂಸತ್ತಿನಲ್ಲಿ ರಾಜ್ಯದ ಪರವಾಗಿ ಧ್ವನಿ ಎತ್ತದೆ ಮೌನವಹಿಸಿದ್ದಾರೆ. ಕೇಂದ್ರ ಸರ್ಕಾರ ರೈತರ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಾಯ್ದೆ ಮೂಲಕ ಮೀಟರ್ ಅಳವಡಿಸುವ ಹಾಗೂ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ದೂರಿದರು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ.ಗಿರೀಶ್ ವಹಿಸಿದ್ದರು. ಕೆಪಿಸಿಸಿ ವಕ್ತಾರ ಕೆ.ಬಿ ಪ್ರಸನ್ನಕುಮಾರ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎನ್.ರಮೇಶ್, ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಪ್ರವೀಣ್‌ಕುಮಾರ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾಕುಮಾರಿ, ಮುಖಂಡರಾದ ಕೆ. ರಂಗನಾಥ್, ಎಸ್.ರವಿಕುಮಾರ್, ಎಚ್.ಸಿ.ಯೋಗೀಶ್, ರೇಖಾ ರಂಗನಾಥ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net