ರಾಜ್ಯದಲ್ಲಿ ಹದಗೆಟ್ಟ ಆರ್ಥಿಕ ಪರಿಸ್ಥಿತಿ

jagadeesh-shatter-
Published on

ಬೆಳಗಾವಿ:  ಬಿಜೆಪಿ ಅಧಿಕಾರವಧಿಯಲ್ಲಿ ಮಂಜೂರಾಗಿದ್ದ ಕಾಮಗಾರಿಗಳೇ ಈಗಲೂ ನಡೆಯುತ್ತಿವೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಿಡಿಗಾಸು ಅನುದಾನ ಸಿಗುತ್ತಿಲ್ಲ. ಸ್ವತಃ ಕಾಂಗ್ರೆಸ್‌ನ ಶಾಸಕರೇ ಇದನ್ನು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ನಿಂತಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಮಾಡಿದ್ದ ಸಾಲವನ್ನು ಬಡ್ಡಿ ಸಮೇತವಾಗಿ ತೀರಿಸಿ ದೇಶವನ್ನು ಉತ್ತಮ ಸ್ಥಿತಿಗೆ ತಂದವರು ಪ್ರಧಾನಿ ನರೇಂದ್ರ ಮೋದಿ. ಜನರು ಅಧಿಕಾರ ಕೊಟ್ಟಾಗ, ಉತ್ತಮವಾಗಿ ಕೆಲಸ ಮಾಡಬೇಕೇ ಹೊರತು, ಕೊಂಕು ಮಾತನಾಡಬಾರದು. ನಿಮ್ಮ ಕೈಯಿಂದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಆಗದಿದ್ದರೆ, ಅಧಿಕಾರ ಬಿಟ್ಟು ಹೋಗಿ. ನಾವು ಸುಧಾರಿಸುತ್ತೇವೆ’ ಎಂದು ವಾಗ್ದಾಳಿ ನಡೆಸಿದರು.

ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್ ಮತ್ತು ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಇದ್ದಾಗ, ಕರ್ನಾಟಕದ ಆರ್ಥಿಕ ಪರಿಸ್ಥಿತಿ ಹಾಳಾಗಿದೆ ಎಂಬ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಸದನದಲ್ಲಿ ಏಕೆ ಪ್ರಶ್ನಿಸಲಿಲ್ಲ. ಅಂದು ಪ್ರಯೋಜನ ಪಡೆದವರೇ ಇಂದು ಟೀಕೆ ಮಾಡುತ್ತಿದ್ದಾರೆ ಎಂದರು.

ಕರ್ನಾಟಕದಲ್ಲಿ ಮನೆ ಮನೆಗೆ ಹೋಗಿ ವೈಜ್ಞಾನಿಕವಾಗಿ ಜಾತಿ ಗಣತಿ ಮಾಡಿಲ್ಲ. ಗುಜರಾತ್‌ನಲ್ಲಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಂದ ನಿರ್ದೇಶನ ಬಂದ ಮೇಲೆ ಜಾತಿ ಗಣತಿ ವರದಿ ಬಿಡುಗಡೆ ಮಾಡಿದ್ದಾರೆ. ಇದನ್ನು ಬಿಡುಗಡೆ ಮಾಡಲು 10 ವರ್ಷ ಬೇಕಾಯಿತೇ? ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net