

ಕಾರವಾರ: ಸೀಬರ್ಡ್ ನೌಕಾ ಯೋಜನೆಯ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು Defense Minister ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ರಾಜನಾಥ ಸಿಂಗ್ ಅವರನ್ನು ನವದೆಹಲಿಯ ಅವರ ಕಚೇರಿಯಲ್ಲಿ ಮಂಗಳವಾರ ಭೇಟಿಯಾದ ಕಾಗೇರಿ, ನೌಕಾನೆಲೆಯಿಂದ ಉಂಟಾಗಿರುವ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಿದರು. ನಿರಾಶ್ರಿತರಿಗೆ ನೀಡಬೇಕಾದ ಬಾಕಿ ಭೂ ಪರಿಹಾರವನ್ನು ನೀಡಬೇಕು. ನೌಕಾ ನೆಲೆಗಾಗಿ ಭೂಮಿ ಕಳೆದುಕೊಂಡವರಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು. ನೌಕನೆಲೆಯ ಹುದ್ದೆಗಳಿಗೆ ನಡೆಯುವ ನೇಮಕಾತಿಗಳಿಗೆ ಕಾರವಾರದಲ್ಲಿಯೇ ಪರೀಕ್ಷೆ ನಡೆಸಬೇಕು ಎಂದು ಮನವಿ ಮಾಡಿದರು.
ರಾಜನಾಥ ಸಿಂಗ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಧಿಕಾರಿಗಳಿಗೆ ಸ್ಥಳದಲ್ಲಿಯೇ ಸೂಚನೆ ನೀಡಿ, ಮನವಿಯ ವಿಷಯಗಳ ಕುರಿತು ತಕ್ಷಣ ಪರಿಶೀಲಿಸುವಂತೆ ನಿರ್ದೇಶನ ನೀಡಿದರು. ಮುಂದಿನ ದಿನಗಳಲ್ಲಿ ಸಮಸ್ಯೆಯುಂಟಾದಲ್ಲಿ ತುರ್ತುಗತಿಯಲ್ಲಿ ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿದರು.