ಮಾಧ್ಯಮ ಪ್ರತಿನಿಧಿಗಳಿಗೆ ಕಾರ್ಯಾಗಾರ, ಡಿಜಿಟಲ್ ಉಪಕ್ರಮಗಳಿಂದ ಭಾರಿ ಪ್ರಯೋಜನ ಎಂದ ಸಂಸದ ರಮೇಶ ಜಿಗಜಿಣಗಿ

VARTALAP
ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ವಾರ್ತಾಲಾಪ ಕಾರ್ಯಾಗಾರ’ವನ್ನು ಸಂಸದ ರಮೇಶ ಜಿಗಜಿಣಗಿ ಉದ್ಘಾಟಿಸಿದರು. ಜಿಲ್ಲಾಧಿಕಾರಿ ಡಾ. ಆನಂದ್ ಕೆ, ಜಿಪಂ ಸಿಇಒ ರಿಷಿ ಆನಂದ್, ಎಸ್‌ಪಿ ಲಕ್ಷ್ಮಣ ನಿಂಬರಗಿ ಮತ್ತಿತರರಿದ್ದರು.
Published on

ವಿಜಯಪುರ: ಕೇಂದ್ರ ಸರ್ಕಾರದ ಡಿಜಿಟಲ್ ಉಪಕ್ರಮಗಳಿಂದಾಗಿ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿಯಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗಾಗಿ ಶುಕ್ರವಾರ ಹಮ್ಮಿಕೊಂಡಿದ್ದ ‘ವಾರ್ತಾಲಾಪ ಕಾರ್ಯಾಗಾರ’ದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರದ ಜನಪರ ಯೋಜನೆಗಳನ್ನು ಮಾಧ್ಯಮದವರಿಗೆ ತಿಳಿಸಲು ವಾರ್ತಾಲಾಪ ಕಾರ್ಯಾಗಾರ ಹಮ್ಮಿಕೊಂಡಿರುವುದು ಸಂತಸದ ಸಂಗತಿ. ಕೇಂದ್ರ ಸರ್ಕಾರದ ಅನೇಕ ಯೋಜನೆಗಳಿಂದ ಜನರು ಫಲಾನುಭವಿಗಳಾಗುತ್ತಿದ್ದಾರೆ. ಡಿಜಿಟಲೀಕರಣದಿಂದ ಯೋಜನೆಗಳ ಲಾಭ ಸುಲಭವಾಗಿ ಎಲ್ಲರಿಗೂ ದೊರೆಯುವಂತಾಗಿದೆ. ಆನ್‌ಲೈನ್ ಹಣಕಾಸು ವಹಿವಾಟು ನಡೆಸುವ ಅಪ್ಲಿಕೇಶನ್‌ಗಳನ್ನು ಜನರು ವ್ಯಾಪಕವಾಗಿ ಬಳಸುತ್ತಿರುವುದು ಅಭಿವೃದ್ಧಿಯ ಸಂಕೇತ ಎಂದು ಹೇಳಿದರು.

ದೇಶದಲ್ಲಿ ಯಾರೂ ಹಸಿವಿನಿಂದ ಬಳಲಬಾರದು ಎನ್ನುವ ದೂರದೃಷ್ಟಿಯನ್ನು ಹೊಂದಲಾಗಿದ್ದು, ಈವರೆಗೂ ಸುಮಾರು 81 ಕೋಟಿಗೂ ಅಧಿಕ ಮಂದಿಗೆ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಉಚಿತವಾಗಿ ಪಡಿತರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಯೋಜನೆಗಳ ಅರಿವು

ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ. ರವೀಂದ್ರ ಮಾತನಾಡಿ, ಪತ್ರಕರ್ತರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸುವುದು ವಾರ್ತಾಲಾಪ ಕಾರ್ಯಾಗಾರದ ಮುಖ್ಯ ಉದ್ದೇಶ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜನಪರ ಯೋಜನೆಗಳು ಜಿಲ್ಲೆ, ತಾಲೂಕು, ಗ್ರಾಮಮಟ್ಟದಲ್ಲಿ ಅನುಷ್ಠಾನ ಮಾಡುವಲ್ಲಿ ಮಾಧ್ಯಮದ ಪಾತ್ರ ಬಹಳ ಮುಖ್ಯವಾಗಿದೆ. ಸ್ವಚ್ಛತಾ ಹೀ ಸೇವಾ ಅಭಿಯಾನದ ಭಾಗವಾಗಿ ಸೆ. 25ರಂದು ಒಂದೇ ದಿನ 5 ಕೋಟಿ ಜನ ಭಾಗಿಯಾಗಿದ್ದು, 3 ಲಕ್ಷ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛ ಮಾಡಲಾಗಿದೆ. ಕೇಂದ್ರ ಸರ್ಕಾರದಿಂದ ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನ, ಸ್ವಸ್ಥ ನಾರಿ ಸಶಕ್ತ ಪರಿವಾರ, ಪೋಷಣ ಅಭಿಯಾನಗಳು ನಡೆಯುತ್ತಿವೆ. ಅಲ್ಪಸಂಖ್ಯಾತರು ಹೆಚ್ಚಾಗಿ ಇರುವ ಈ ಜಿಲ್ಲೆಯಲ್ಲಿ ಅವರಿಗಾಗಿ ಅನೇಕ ಯೋಜನೆಗಳಿವೆ. ಅದನ್ನು ಜನರಿಗೆ ತಲುಪಿಸುವಲ್ಲಿ ಮಾಧ್ಯಮದವರ ಪಾತ್ರ ಹಿರಿದು ಎಂದು ಹೇಳಿದರು.

ಮಾಧ್ಯಮಗಳ ಪಾತ್ರ ಅನನ್ಯ

ಜಿಲ್ಲಾಧಿಕಾರಿ ಡಾ. ಆನಂದ್ ಕೆ ಮಾತನಾಡಿ, ಉತ್ತಮ ಸಮಾಜ ನಿರ್ಮಾಣದಲ್ಲಿ ಆಡಳಿತ ಹಾಗೂ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ಸರ್ಕಾರದ ಯೋಜನೆಗಳನ್ನು ಮತ್ತಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಎಸ್‌ಪಿ ಲಕ್ಷ್ಮಣ ನಿಂಬರಗಿ ಮಾತನಾಡಿ, ಮಾಧ್ಯಮಗಳು ಸುದ್ದಿ ಬಿತ್ತರಿಸುವ ಮುನ್ನ ಸಾಮಾಜಿಕ ಜವಾಬ್ದಾರಿ ಪಾಲಿಸಬೇಕು. ಸೂಕ್ಷ್ಮ ಘಟನೆಗಳ ವರದಿಗಾರಿಕೆಯ ವೇಳೆ ಕಾನೂನಿನ ಅರಿವಿನೊಂದಿಗೆ ವರದಿ ಮಾಡಿದಾಗ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಸಾಧ್ಯ ಎಂದು ತಿಳಿಸಿದರು.

ಜಿಪಂ ಸಿಇಒ ರಿಷಿ ಆನಂದ್ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಗಣನೀಯವಾಗಿದೆ. ಸಮಾಜದಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿದಾಗ ಮಾತ್ರ ನಾವು ಬದಲಾವಣೆ ಕಾಣಲು ಸಾಧ್ಯ ಎಂದು ತಿಳಿಸಿದರು.

ಕೂಡಗಿ ಎನ್‌ಟಿಪಿಸಿಯ ಪ್ರಧಾನ ವ್ಯವಸ್ಥಾಪಕ ಸಂತೋಷ ತಿವಾರಿ ಮಾತನಾಡಿದರು. ಸಹಾಯಕ ಆಯುಕ್ತ ವೈ.ಸಿ. ಪೂಜಾರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಂಪತ್ ಕುಮಾರ ಗುಣಾರಿ, ಅಧಿಕಾರಿಗಳಾದ ಶಿವನಗೌಡ ಎಸ್. ಪಾಟೀಲ, ಬಿ. ಸಿದ್ದಯ್ಯ, ಭಾರತಿ ಪಾಟೀಲ, ಡಾ. ಶಂಕರಗೌಡ ಪಾಟೀಲ ಅವರು ಮಾಹಿತಿ ನೀಡಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಪ್ರಕಾಶ ಜಿ. ಬೆಣ್ಣೂರ ಮತ್ತಿತರರಿದ್ದರು.

ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು, ಕೇಂದ್ರ ಸಂವಹನ ಇಲಾಖೆ, ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕೀಯರ ಸಂಘ (ರಿ) ದ ಸಂಯುಕ್ತಾಶ್ರಯದಲ್ಲಿ ಕಾರ್ಯಾಗಾರ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net