ಮುಡಾ ಹಗರಣ : ಬಿಜೆಪಿ-ಜೆಡಿಎಸ್ ವಿರುದ್ಧ ಪ್ರತಿ ಹೋರಾಟಕ್ಕೆ ಮಹತ್ವದ ಸಭೆ ನಡೆಸಿದ ಸಿದ್ದರಾಮಯ್ಯ

CM Meeting
Published on

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಗರಣದ ವಿಚಾರವಾಗಿ ಬಿಜೆಪಿ ಮತ್ತು ಜೆಡಿಎಸ್ ಕೈಗೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಗೆ ಪ್ರತಿ ಹೋರಾಟ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ತಮ್ಮ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು.

ಮೈಸೂರು, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಯ ಸಚಿವರು, ಶಾಸಕರು ಹಾಗೂ ಪಕ್ಷದ ಮುಖಂಡರೊಂದಿಗೆ ಬೆಳಗ್ಗೆ ಉಪಹಾರ ಸೇವಿಸಿದ ಸಿದ್ದರಾಮಯ್ಯ ನಂತರ ಸಭೆ ನಡೆಸಿ ಹೋರಾಟದ ರೂಪುರೇಷೆಯ ಕುರಿತು ಚರ್ಚೆ ನಡೆಸಿದರು. ಮುಡಾದಿಂದ ನನ್ನ ಪತ್ನಿ ಪಾರ್ವತಿ ಪಡೆದಿರುವ ಬದಲಿ ನಿವೇಶನದಲ್ಲಿ ಯಾವುದೇ ರೀತಿಯ ಅಕ್ರಮ ನಡೆದಿಲ್ಲ. ವಿಜಯನಗರದಲ್ಲಿಯೇ ನಿವೇಶನ ಬೇಕೆಂದು ನಾವು ಅರ್ಜಿ ಸಲ್ಲಿಸಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ನಮಗೆ ನಿವೇಶನ ಮಂಜೂರಾಗಿದೆ. ಆದರೆ, ಇದೀಗ ರಾಜಕೀಯ ಕಾರಣಕೋಸ್ಕರ ನನ್ನ ವಿರುದ್ಧ ಆರೋಪಗಳನ್ನು ಹೊರಿಸುತ್ತಿದ್ದಾರೆ. ಇದಕ್ಕೆ ತಕ್ಕ ಉತ್ತರ ನೀಡಲು ಹೋರಾಟ ರೂಪಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್ ರಾಜಕೀಯ ದುರುದ್ದೇಶ ಇಟ್ಟುಕೊಂಡು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ನವರ ಬಂಡವಾಳವನ್ನು ಜನತೆಗೆ ತಿಳಿಸುವ ಕಾರ್ಯ ಮಾಡಬೇಕು. ನಮ್ಮ ಸರ್ಕಾರ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ. ಬಿಜೆಪಿ ಹಾಗೂ ಜೆಡಿಎಸ್ ಸರ್ಕಾರದ ಅವಧಿಯಲ್ಲಿ ಹಲವಾರು ಭ್ರಷ್ಟಾಚಾರಗಳು ನಡೆದಿದ್ದು, ಅದನ್ನು ಜನತೆಗೆ ತಿಳಿಸುವ ಕಾರ್ಯ ಮಾಡಬೇಕು ಕರೆ ನೀಡಿದ್ದಾರೆ.

ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಮುಖ್ಯಮಂತ್ರಿ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಕೆ. ಹರೀಶ್ ಗೌಡ, ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಕೋಟೆ ಶಿವಣ್ಣ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಶಾಸಕ ಎಚ್.ಪಿ. ಮಂಜುನಾಥ್, ವಿಧಾನ ಪರಿಷತ್ ಮಾಜಿ ಸದಸ್ಯರಾದ ಮರಿತಿಬ್ಬೇಗೌಡ, ಸಂದೇಶ್ ನಾಗರಾಜ್, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷ ಅಯೂಬ್ ಖಾನ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮರಿಗೌಡ ಹಾಗೂ ಇತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net